ಚಿತ್ರದುರ್ಗ: ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಕುರಿತಂತೆ ಹೆಚ್ಚಿನ ನಿಗಾ ವಹಿಸಿ, ಕ್ರಮ ಜರುಗಿಸಬೇಕು ಎಂದು ಯೋಜನೆ ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಮುಂದುವರೆದ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದಲೂ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯದಿರುವ 3773 ಪಡಿತರ ಚೀಟಿಗಳನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಹೊಸ ಪಡಿತರ ಚೀಟಿಗಾಗಿ 6900 ಅರ್ಜಿಗಳು ಬಾಕಿ ಇವೆ. 1500 ಕ್ಕೂ ಹೆಚ್ಚು ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಎಪಿಎಲ್ ಕಾರ್ಡ್‍ಗೆ ಪರಿವರ್ತಿಸಲು ಸಹ ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಮ ಮರಿಯಾಳ್ ಹೇಳಿದರು.
ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ಮಾತನಾಡಿ, ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಬೇರೆ ಕಡೆಗಳಿಗೆ ಕಳ್ಳ ಸಾಗಾಣಿಕೆ ಮಾಡಲಾಗುತ್ತಿರುವ ಅಂಶಗಳು ಬೆಳಕಿಗೆ ಬಂದಿವೆ. ನಮ್ಮ ಜಿಲ್ಲೆಯಲ್ಲಿಯೂ ಇಂತಹ ಪ್ರಕರಣಗಳು ಗಮನಕ್ಕೆ ಬಂದಿವೆಯೇ ಎಂದು ಪ್ರಶ್ನಿಸಿದರು. ಪ್ರತಿಕ್ರಿಯಿಸಿದ ಆಹಾರ ಇಲಾಖೆ ಜಂಟಿನಿರ್ದೇಶಕರು, ಜಿಲ್ಲೆಯಲ್ಲಿ ಈ ವರ್ಷ 07 ಪ್ರಕರಣಗಳನ್ನು ದಾಖಲಿಸಿದ್ದು, 01 ನ್ಯಾಯಬೆಲೆ ಅಂಗಡಿಯ ಪರವಾನಗಿ ಅಮಾನತು ಮಾಡಲಾಗಿದೆ ಎಂದರು. ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಕುರಿತಂತೆ ಹೆಚ್ಚಿನ ನಿಗಾ ವಹಿಸಿ, ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದರು.