ಬೆಂಗಳೂರು : ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ (94) ನಿಧನರಾಗಿದ್ದು, ನಾಡಿದ್ದು ಶುಕ್ರವಾರ ಮೈಸೂರಿನಲ್ಲಿ ಎಸ್ .ಎಲ್ ಭೈರಪ್ಪ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ನಾಳೆ ಮಧ್ಯಾಹ್ನದವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್.ಎಲ್ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಂತರ ಪಾರ್ಥಿವ ಶರೀರವನ್ನು ಮೈಸೂರಿಗೆ ಕೊಂಡೊಯ್ಯಲಾಗುತ್ತದೆ. ನಾಡಿದ್ದು ಮೈಸೂರಿನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎಸ್.ಎಸ್ ಭೈರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ (ಎಸ್.ಎಲ್ ಭೈರಪ್ಪ) ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.