ಬೆಂಗಳೂರು: ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಸರ್ಕಾರದ ವಿವಿಧ ವಸತಿ ಯೋಜನೆಗಳಲ್ಲಿ ಮುಸ್ಲಿಮರಿಗೆ ಶೇಕಡ 15ರಷ್ಟು ಮೀಸಲಾತಿ ನಿಗದಿಪಡಿಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಈಶ್ವರಪ್ಪ ಅವರು ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಶಿವಮೊಗ್ಗ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಕೆ.ಎಸ್. ಈಶ್ವರಪ್ಪ ಅವರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕ ಸದಸ್ಯದ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಕೆಲಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಈಶ್ವರಪ್ಪ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು. ಪ್ರಕರಣ ಸಂಬಂಧ ತನಿಖೆಗೆ ಈಶ್ವರಪ್ಪ ಸಹಕರಿಸಬೇಕು ಎಂದು ನಿರ್ದೇಶಿಸಿದೆ. ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ದೂರುದಾರ ಕೋಟೆ ಪೊಲೀಸ್ ಠಾಣೆ ಅಧಿಕಾರಿ ಸಂತೋಷ್ ಎಸ್. ಬಾಗೋಜಿ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಲಾಗಿದೆ.