ಬೆಂಗಳೂರು: ದಸರಾ ಹಬ್ಬ ಮುಗಿದ ನಂತರ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಆಗಲಿದೆ. ಪೊಲೀಸ್ ಇಲಾಖೆಯಲ್ಲಿ ದೊಡ್ಡ ಬದಲಾವಣೆಗೆ ಯೋಜಿಸಿರುವ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಪೊಲೀಸರ ಸಾಮೂಹಿಕ ವರ್ಗಾವಣೆಗೆ ಮುಂದಾಗಿದೆ.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಎರಡನೇ ಬಾರಿಗೆ ಮೇಜರ್ ಸರ್ಜರಿಗೆ ಸರ್ಕಾರ ಸಿದ್ಧತೆ ನಡೆಸಿದೆ. ವರ್ಗಾವಣೆಗೆ ಮುಹೂರ್ತ ನಿಗದಿಯಾದ ಬೆನ್ನಲ್ಲೇ ಆಯಕಟ್ಟಿನ ಸ್ಥಾನ ಪಡೆದುಕೊಳ್ಳಲು ಕೆಲವು ಅಧಿಕಾರಿಗಳು ಲಾಬಿ ಆರಂಭಿಸಿದ್ದಾರೆ. ಒಂದೇ ಕಾರ್ಯಸ್ಥಾನದಲ್ಲಿ ಎರಡು ವರ್ಷ ಪೂರ್ಣಗೊಳಿಸಿದ ಡಿವೈಎಸ್ಪಿ, ಎಸಿಪಿ ಹಾಗೂ ಇನ್ಸ್ಪೆಕ್ಟರ್ ಗಳ ಜೊತೆಗೆ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೂ ಸರ್ಕಾರ ಚಿಂತನೆ ನಡೆಸಿದೆ. ಇತ್ತೀಚೆಗೆ ಕೆಲವು ಕಡೆ ಕಾನೂನು ಸುವ್ಯವಸ್ಥೆಗೆ ಭಂಗ ತಂದ ಗಲಾಟೆ, ಭ್ರಷ್ಟಾಚಾರ ಪ್ರಕರಣಗಳು ಕೂಡ ಈ ಮಹತ್ವದ ಕ್ರಮಕ್ಕೆ ಕಾರಣವಾಗಿವೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೆಲದಿನಗಳ ಹಿಂದೆ ಈ ಬಗ್ಗೆ ಉನ್ನತ ಮಟ್ಟದ ಸಭೆ ನಡೆದಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಎಂ.ಎ. ಸಲೀಂ, ಎಡಿಜಿಪಿ(ಆಡಳಿತ) ಸೌಮೇಂದು ಮುಖರ್ಜಿ ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಅಜುಂ ಫರ್ವೇಜ್ ಅವರು ಸಭೆಯಲ್ಲಿ ಭಾಗವಹಿಸಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.