ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಸಂಜಯ್ ನಗದಲ್ಲಿರುವ ಸಚಿವ ಸುಧಾಕರ್ ನಿವಾಸದ ಬಳಿ ಪ್ರತಿಭಟನೆ ನಡೆಸಿರುವ ಎಬಿವಿಪಿ ಕಾರ್ಯಕರ್ತರು, ಸರ್ಕಾರದ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ವ್ಯಕ್ತಪಡಿಸಿದರು. ಅತಿಥಿ ಉಪನ್ಯಾಸಕರ ನೇಮಕ ಮಾಡದೇ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚಲ್ಲಾಟವಾಡುತ್ತಿದೆ. ಹಲವು ಬಾರಿ ಮನವಿ ಮಾಡಿದರೂ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಕಿಡಿಕಾರಿದರು.
ಇದೇ ವೇಳೆ ಪೊಲೀಸರು ಪ್ರತಿಭಟನಾಕಾರರಿಗೆ ಫ್ರೀಡಂ ಪಾರ್ಕ್ ಗೆ ತೆರಳಿ ಪ್ರತಿಭಟನೆ ನಡೆಸುವಂತೆ ಮನವೊಲಿಸುವ ಯತ್ನ ನಡೆಸಿದರು. ಆದಾಗ್ಯೂ ಒಪ್ಪದ ಎಬಿವಿಪಿ ಕಾರ್ಯಕರ್ತರು ಸಚಿವರ ಮನೆ ಮುಂದೆಯೇ ಧರಣಿ ನಡೆಸಿದ್ದಾರೆ. ಇದೇ ವೇಳೆ ಕೆಲ ಪ್ರತಿಭಟನಾಕಾರರು ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುನ್ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.