ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನೆರೆಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ವಿಜಯಪುರ, ಯಾದಗಿರಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಮಳೆ ಪ್ರವಾಹದಿಂದ ಹಾನಿಯಾಗಿರುವ ಪ್ರದೇಶಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಬೆಳಿಗ್ಗೆ 10:30 ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ಹೊರಟು 11:40ಕ್ಕೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ವಿಜಯಪುರ, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಮಳೆ ಹಾನಿ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಕಲಬುರಗಿ ನಗರದ ಐವಾನ್ ಶಾಹಿ ವಸತಿ ಗೃಹಕ್ಕೆ ಆಗಮಿಸಲಿರುವ ಸಿಎಂ ಭೋಜನ ವಿರಾಮದ ನಂತರ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಮಳೆ ಹಾನಿ ಪ್ರದೇಶಗಳಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಳೆ ಹಾನಿ ಪರಿಹಾರದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪ್ರವಾಹದಿಂದಾಗಿ ಬೆಳೆ, ಮನೆ ಹಾನಿಗೀಡಾದ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.