ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಮತ್ತು ಅತಿವೃಷ್ಠಿಯಿಂದಾಗಿ ಇದುವರೆಗೆ 8.60 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯ ಅಂದಾಜು ಮಾಡಲಾಗಿದೆ. ಮಂಗಳವಾರ ಮುಖ್ಯಮಂತ್ರಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದು, ಪರಿಹಾರದ ಬಗ್ಗೆ ನಿರ್ಧರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಅತಿವೃಷ್ಟಿ ಹಾಗೂ ಪ್ರವಾಹದಿಂದ 8.60 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯ ಅಂದಾಜು ಮಾಡಲಾಗಿದೆ. ಭೂಮಿ ಒಣಗಿದ ನಂತರ ಆಯಾ ಜಿಲ್ಲಾಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಲಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ, ಕೆಲವು ಕಡೆ ಕಡಿಮೆ ಮಳೆಯಾಗಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಸೇರಿ ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಕೃಷ್ಣಾ, ಭೀಮಾ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಮಳೆ ಪರಿಹಾರಕ್ಕೆ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 1385 ಕೋಟಿ ರೂಪಾಯಿ ಇದೆ. ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಸದ್ಯಕ್ಕೆ ತಾತ್ಕಾಲಿಕ ಪರಿಹಾರ ಕ್ರಮ ಕೈಗೊಳ್ಳಲಾಗಿದ್ದು, ಸಿಎಂ ಅವರು ಮಂಜೂರಾತಿ ನೀಡಿದ್ದಾರೆ. 75 ಕಡೆ ನೆರವು ಕೇಂದ್ರ ತೆರೆಯಲಾಗಿದ್ದು, 8919 ಸಂತ್ರಸ್ತರಿಗೆ ವಸತಿ, ಊಟ, ಮಲಗಲು ಬೇಕಾದ ವಸ್ತುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.