ಬೆಳಗಾವಿ: ಗ್ಯಾರಂಟಿ ಯೋಜನೆಗಳಿಗೆ ಎನ್ ಡಿ ಆರ್ ಎಫ್ ಹಣ ಬಳಕೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರಿಗೆ ಕಾಮಾಲೆ ರೋಗ ಅಂಟಿಕೊಂಡಿದೆ ಎಂದು ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳು ಕರ್ನಾಟಕದಲ್ಲಿ ಯಶಸ್ವಿಯಾಗಿದೆ. ಹಾಗಾಗಿ ಬಿಜೆಪಿಯವರಿಗೆ ತಳಮಳ ಶುರುವಾಗಿದೆ ಎಂದು ಹೇಳಿದರು.
ಎನ್ ಡಿ ಆರ್ ಎಫ್ ಅನುದಾನವನ್ನು ನಾವು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿಲ್ಲ. ಬಿಜೆಪಿಯವರಿಗೆ ಕಾಮಾಲೆ ರೋಗ ಅಂಟಿಕೊಂಡಿದೆ ಎಂದರು. ಮಹಾರಾಷ್ಟ್ರ, ದೆಹಲಿ, ರಾಜಸ್ಥಾನ, ಹರಿಯಾಣ ರಾಜ್ಯಗಳಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಅನುಕರಣೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರು ಗ್ಯಾರಂಟಿ ಯೋಜನೆಗಳನ್ನು ಯಾವ ಕಾರಣಕ್ಕೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ ಎಂದಿದ್ದರು. ಆದರೆ ನಾವು ಅನುಷ್ಠಾನಕ್ಕೆ ತಂದಿದ್ದೇವೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.