ಬೆಂಗಳೂರು: ರಾಜ್ಯದಲ್ಲಿ ಕೆರೆಗಳನ್ನು ಒತ್ತುವರಿ ಮಾಡಿಕೊಂಡ ರೈತರು ತಾವೇ ಅದನ್ನು ಬಿಟ್ಟು ಕೊಡಬೇಕು. ಇಲ್ಲದಿದ್ದಲ್ಲಿ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಣ್ಣ ನೀರಾವರಿ ಇಲಾಖೆಯಿಂದ ಆಯೋಜಿಸಿದ್ದ ‘ನೀರಿದ್ದರೆ ನಾಳೆ, ಜಲವೇ ಜಗದ ಜೀವಾಳ’ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೆ.ಸಿ. ವ್ಯಾಲಿ ಯೋಜನೆ ಜಾರಿಗೊಳಿಸುವ ಮೂಲಕ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಕೆರೆಗಳನ್ನು ತುಂಬಿಸಲಾಗಿದೆ. ಹೀಗಾಗಿ ಅಲ್ಲಿ 200 ಅಡಿ, 300 ಅಡಿಗೆ ನೀರು ಸಿಗುವಂತಾಗಿದೆ. ಈ ಮೊದಲು 2000 ಅಡಿವರೆಗೂ ಬೋರ್ ವೆಲ್ ಕೊರೆಸಬೇಕಿತ್ತು ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಅಂತರ್ಜಲ ವೃದ್ದಿಗೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ. ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಡಿಸೆಂಬರ್ ವೇಳೆಗೆ 41,849 ಕೆರೆಗಳ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ.
ಸಣ್ಣ ನೀರಾವರಿ ಇಲಾಖೆಯ ರಾಯಭಾರಿ, ನಟ ವಶಿಸ್ಟ ಸಿಂಹ ನೀರಿನ ಮಹತ್ವ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಸಿ. ಮಹಾದೇವಪ್ಪ, ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವರು ಇದ್ದರು.