ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಭಾರಿ ಚರ್ಚೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಅಧಿಕಾರವೂ ಇಲ್ಲ. ಎಲ್ಲ ಕೇವಲ ವದಂತಿ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಧ್ಯಮಗಳು ಗಾಳಿ ಸುದ್ದಿ ಪ್ರಕಟಿಸುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿಗಳು ಅಥವಾ ನಾನು ಪ್ರಸ್ತಾವನೆ ಮಾಡಬೇಕು. ನಾವಿಬ್ಬರೂ ಪ್ರಸ್ತಾಪ ಮಾಡಲಿಲ್ಲವಾದರೆ ಅದು ಗಾಳಿ ಸುದ್ದಿ. ಆತುರದಲ್ಲಿರುವವರು, ಮಾಧ್ಯಮಗಳ ಮುಂದೆ ಮಾತನಾಡುತ್ತಾರೆ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.
ಮುಂದೆ ಸಿಎಂ ಪಾಲಿಕೆಗಳು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಾರೆ. ನಾನು ಕೂಡ ಇಂದು ಜಿಬಿಎ ಪಾಲಿಕೆಗಳ ಚುನಾವಣೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರ ಸಭೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಪಾಲಿಕೆಗಳಲ್ಲಿ ಸಿಬ್ಬಂದಿ ಹಾಗೂ ಕಟ್ಟಡ ಸಮಸ್ಯೆ ಪರಿಹರಿಸಲು ಎಲ್ಲಾ ವ್ಯವಸ್ಥೆ ಮಾಡಲಾಗುವುದು. ಕಟ್ಟಡ ನಿರ್ಮಾಣಕ್ಕೆ ಜಾಗಗಳು ಗುರುತಿಸಲಾಗಿದ್ದು, 2 ವರ್ಷದಲ್ಲಿ ನಿರ್ಮಾಣ ಮಾಡುತ್ತೇವೆ. ಅಲ್ಲಿಯವರೆಗೂ ಬಾಡಿಗೆ ಕಟ್ಟಡದಲ್ಲಾದರೂ ವ್ಯವಸ್ಥೆ ಮಾಡುತ್ತೇವೆ ಎಂದರು.