ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ನಡಿಗೆ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ ಹೈಡ್ರಾಮಾ ವಿಚಾರವಾಗಿ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದಲ್ಲಿ ಕಾಂಗ್ರೆಸ್ ಗೂಂಡಾಗಿರಿ ನಡೆಸುತ್ತಿದೆ. ಮುನಿರತ್ನ ಮೇಲೆ ಹಲ್ಲೆಗೆ ಯತ್ನಿಸಿರುವುದನ್ನು ಖಂಡಿಸುತ್ತೇವೆ ಎಂದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸರ್ಕಾರದ ಕಾರ್ಯಕ್ರಮ ಎಂದು ಹೇಳಿ ಆ ಭಾಗದ ಶಾಸಕರು, ಸಂಸದರಿಗೆ ಆಹ್ವಾನಿಸಿಲ್ಲ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಮುನಿರತ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಓರ್ವ ಶಾಸಕರ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದು ಎಷ್ಟು ಸರಿ? ಇದನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರ ಗೂಂಡಾಗಿರಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದೇ ಒಂದು ರಸ್ತೆ ಸರಿಯಿಲ್ಲ, ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಸುರಿಯುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದು ಜನರು ಸಾಯುತ್ತಿದ್ದಾರೆ. ಇದ್ಯಾವುದನ್ನೂ ಸರಿಪಡಿಸದೇ ನಡಿಗೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ಇವರು ನಡಿಗೆ ಮಾಡುತ್ತಿದ್ದಾರೆ? ಇದು ನಡುಗೆ ಕಾರ್ಯಕ್ರಮವಲ್ಲ ರಾಜಕೀಯಕ್ಕಾಗಿ ದೊಂಬರಾಟ ಎಂದು ಕಿಡಿಕಾರಿದರು.
ಶಾಸಕರ ಮೇಲೆ ಹಲ್ಲೆಗೆ ಯತ್ನ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗೂಂಡಾಗಿರಿ ನಡೆಸುತ್ತಿದೆ. ಕಾಂಗ್ರೆಸ್ ನವರು ರಾಜ್ಯದಲ್ಲಿ ರೌಡಿಯಿಸಂ ಮಾಡುತ್ತಿದ್ದಾರೆ. ಮುಂದೆ ನಾವು ಗೆಲ್ಲುವುದಿಲ್ಲ, ನಜ ನಮ್ಮ ವಿರುದ್ಧ ತಿರುಗಿ ಬೀಲುತ್ತಿದ್ದಾರೆ ಎಂಬುದು ಅವರಿಗೆ ಗೊತ್ತಾಗುತ್ತಿದೆ. ಹಾಗಾಗಿ ದಬ್ಬಾಳಿಕೆ, ರೌಡಿಸಂ ಮಾಡಿ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಮುನಿರತ್ನ ನಡೆಸುತ್ತಿರುವ ಪ್ರತಿಭಟನೆಗೆ ನಮ್ಮ ಬೆಂಬಲವಿದೆ ಎಂದು ಹೇಳಿದರು.