ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆರ್ಥಿಕ ನೆರವು ಪಡೆಯುವ ಸಹಕಾರ ಸಂಘಗಳ ಸಿಬ್ಬಂದಿಯೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹಾಸನ ಜಿಲ್ಲೆಯ ಹಿರೇಕಡಲೂರು ಪ್ರಾಥಮಿಕ ಕೃಷಿ ಹೊತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಸಿ.ಎ. ಕೀರ್ತಿಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲು ಅನುಮತಿ ನೀಡುವಂತೆ ನ್ಯಾಯಾಲಯವು ಸಂಘಕ್ಕೆ ನಿರ್ದೇಶಿಸಿದೆ.
ಕೀರ್ತಿಕುಮಾರ್ ವಿರುದ್ಧ ತನಿಖೆಗೆ ಅನುಮತಿ ನಿರಾಕರಿಸಿ ನಿರ್ಣಯ ಕೈಗೊಂಡಿದ್ದ ಸಂಘದ ಕ್ರಮವನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ ಅವರಿದ್ದ ಏಕಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.
ವಾದ, ಪ್ರತಿವಾದ ಆಲಿಸಿ ದಾಖಲೆ ಪರಿಶೀಲಿಸಿದ ಹೈಕೋರ್ಟ್ ನ್ಯಾಯಪೀಠ, ಸಂಘವು ಸರ್ಕಾರಿ ಸಂಸ್ಥೆಯಲ್ಲ. ಆದರೆ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 2 ಸಿ ಯಲ್ಲಿ ತಿಳಿಸಿರುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹಣಕಾಸು ನೆರವು ಪಡೆಯುವ ಕೃಷಿ, ಕೈಗಾರಿಕೆ, ಬ್ಯಾಂಕಿಂಗ್, ವ್ಯಾಪಾರದಲ್ಲಿ ತೊಡಗಿರುವ ಸಹಕಾರಿ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಅಥವಾ ಇತರೆ ಪದಾಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಬಹುದು ಎಂದು ಆದೇಶಿಸಿದೆ.