ಮೈಸೂರು: ಮೈಸೂರು ದಸರಾ ವೇಳೆ ಬಲೂನು ಮಾರಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾರಾಜು ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಬಂಧನ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ರೇಣುಕಾರಾಜು ಪೋಸ್ಟ್ ಮಾಡಿದ್ದರು. ಪ್ರಕರಣದ ನಿಜವಾದ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ ಎಂದು ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೇಣುಕಾರಾಜು ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಅಕ್ಟೋಬರ್ 9ರಂದು ನಜರ್ ಬಾದ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಆರೋಪಿ ಬಂಧನ ಎಂದು ಹೇಳಿರುವ ವಿಚಾರದಲ್ಲಿ ವಿಶ್ವಾಸವಿಲ್ಲ. ಈ ಬಗ್ಗೆ ಕೂಲಂಕುಷ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದರು. ರೇಣುಕಾರಾಜು ಅವರ ಈ ಪೋಸ್ಟ್ ವೈರ್ ಆಗುತ್ತಿದ್ದಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸದರಿ ಹೇಳಿಕೆ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ವೈಜ್ಞಾನಿಕ ಹಾಗೂ ಪಾರದರ್ಶಕವಾಗಿ ತನಿಖೆ ಮಾಡುತ್ತಿದ್ದರೂ ನೀವು ಪೊಲೀಸರ ಬಗ್ಗೆ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡುತ್ತಿದ್ದೀರಿ. ಆಧಾರರಹಿತ ಹೇಳಿಕೆ ನೀಡುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ನಿಮ್ಮ ಮೇಲೆ ಯಾಕೆ ಕ್ರಮ ಕೈಗೊಳ್ಳಬಾರದು? ನೋಟಿಸ್ ತಲುಪಿದ ತಕ್ಷಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.