ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಿದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ನೀಡಿದ ಬೆನ್ನಲ್ಲೇ ಇತರೆ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ವಿನಾಯಿತಿ ನೀಡಲು ಸರ್ಕಾರ ಮುಂದಾಗಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಾಣ ಮಾಡಿದ ನೆಲ ಅಂತಸ್ತು, ಎರಡು ಅಂತಸ್ತು, ಸ್ಟಿಲ್ಟ್ ಮತ್ತು ಮೂರು ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ವಿನಾಯಿತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ನಗರಾಭಿವೃದ್ಧಿ ಇಲಾಖೆಯಿಂದ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಿದ್ದು, ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆಯಡಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ, ಕರ್ನಾಟಕ ಪುರಸಭೆಗಳ ಅಧಿನಿಯಮದಡಿ ಪುರಸಭೆಗಳ ವ್ಯಾಪ್ತಿಯಲ್ಲಿ ವಿನಾಯಿತಿ ಕೋರಲಾಗುವುದು. ಈ ವೇಳೆ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿದ ಕಟ್ಟಡಗಳಿಗೆ ಮಾತ್ರ ವಿನಾಯಿತಿ ಕೋರಲಿದ್ದು, ಸಂಪುಟ ಸಭೆಯಲ್ಲಿ ನಕ್ಷೆ ಮಂಜೂರಾತಿ ಪಡೆಯದ ಕಟ್ಟಡಗಳಿಗೂ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕಳೆದ 8 ತಿಂಗಳಿಂದ ಮನೆ ನಿರ್ಮಾಣ ಮಾಡಿ ವಿದ್ಯುತ್, ನೀರಿನ ಸಂಪರ್ಕವಿಲ್ಲದೆ ಪರದಾಡುತ್ತಿದ್ದ ಸಾರ್ವಜನಿಕರಿಗೆ ರಿಲೀಫ್ ನೀಡಲು ಸರ್ಕಾರ ಮುಂದಾಗಿದೆ. ನಕ್ಷೆ ಮಂಜೂರಾತಿ ಪ್ರಕಾರ ವಸತಿ ಅಥವಾ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡದ ಓಸಿ, ಸಿಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್ ನೀರಿನ ಸಂಪರ್ಕ ನೀಡದಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಎಲ್ಲಾ ಎಸ್ಕಾಂಗಳಲ್ಲಿಯೂ 2025ರ ಮಾರ್ಚ್ ನಿಂದ ಓಸಿ, ಸಿಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ ನೀಡದೆ ಸಾವಿರಾರು ಮಂದಿಗೆ ತೊಂದರೆಯಾಗಿತ್ತು. ಇದನ್ನು ಮನಗಂಡು ವಿನಾಯಿತಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.