ಕಲಬುರಗಿ: ಮಹಿಳೆ ಕೊಲೆ ಮತ್ತು ಆಕೆಯ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಜೀವಾವಧಿ ಶಿಕ್ಷೆ, 3.50 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಶಫಿ ಶೇಖ್ ಡಿ.ಕೆ.(22) ಅಲಿಯಾಸ್ ರೆಹಾನ್ ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದಾನೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶಫೀ ಶೇಖ್ 2024ರ ಮಾರ್ಚ್ 15 ರಂದು ಆಕೆಯೊಂದಿಗೆ ಜಗಳವಾಡಿ ಹೊಡೆದು ಸರ್ಜಿಕಲ್ ಬ್ಲೇಡ್ ನಿಂದ ಚುಚ್ಚಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದ. ನಂತರ ಆಕೆಯ ಅಪ್ರಾಪ್ತ ವಯಸ್ಸಿನ ಪುತ್ರಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ.
ಕಲಬುರಗಿಯ ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಇನ್ಸ್ಪೆಕ್ಟರ್ ಮೊಹಮ್ಮದ್ ಫಸೀಯುದ್ದಿನ್ ಅವರು ದೋಷಾರೋಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ(ಪೋಕ್ಸೋ) ಮೊಹಮ್ಮದ್ ಮುಜೀಬ್ ಉಲ್ಲಾ ಸಿ.ಜಿ. ಅವರು ಪೋಕ್ಸೋ ಕಾಯ್ದೆಗೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷ ಜೈಲು, 2.50 ಲಕ್ಷ ರೂ. ದಂಡ ವಿಧಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಿದ್ದಾರೆ. ನೊಂದ ಬಾಲಕಿಗೆ ಕಾನೂನು ಪ್ರಾಧಿಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕರಾದ(ಪೋಕ್ಸೋ) ಶಾಂತವೀರ ಬಿ. ತುಪ್ಪದ ಅವರು ವಾದ ಮಂಡಿಸಿದ್ದರು.