ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ಮುತಗಾದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶಹಾಬಾದ್ ತಾಲೂಕಿನ ಜೀವಣಗಿ ಗ್ರಾಮದ ಮಲ್ಲಿಕಾರ್ಜುನ ಪಾಟೀಲ, ಮುತಗಾ ಗ್ರಾಮದ ಸಾಬಣ್ಣ ಪಟ್ಟಿದಾರ, ಶಿವರಾಜ ನಾಟಿಕಾರ ಬಂಧಿತ ಆರೋಪಿಗಳಾಗಿದ್ದಾರೆ.
ಅನೇಕ ವರ್ಷಗಳಿಂದ ಅಂಬಿಗರ ಚೌಡಯ್ಯ ಪ್ರತಿಮೆ ಸುತ್ತಲಿನ ಪ್ರದೇಶದ ಅಭಿವೃದ್ಧಿಯಾಗಿಲ್ಲ. ಪ್ರತಿಮೆಗೆ ಹಾನಿ ಮಾಡಿದರೆ ಸುದ್ದಿಯಾಗುತ್ತದೆ. ಜನರ ಗಮನ ಸೆಳೆಯುವ ಜೊತೆಗೆ ಅಭಿವೃದ್ಧಿಗೆ ಅನುದಾನವೂ ಬರುತ್ತದೆ ಎಂದು ಆರೋಪಿಗಳು ಈ ಕೃತ್ಯವೆಸಗಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಅಡ್ಡೂರು ಶ್ರೀನಿವಾಸಲು ಮಾಹಿತಿ ನೀಡಿದ್ದಾರೆ.
ಚಿತ್ತಾಪುರ ಮತಕ್ಷೇತ್ರದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಹೇಯ ಕೃತ್ಯ ಖಂಡನೀಯ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರಿಗೆ ಕಾನೂನು ಅಡಿಯಲ್ಲಿ ಕಠಿಣ ಶಿಕ್ಷೆಯಾಗಲಿದೆ. ಘಟನೆ ಕುರಿತು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಆರೋಪಿಗಳನ್ನು ಶೀಘ್ರವೇ ಪತ್ತೆಹಚ್ಚಿ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದರು.