ಚೆನ್ನೈ: ತಮಿಳು ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ನೋಂದಾಯಿತ ರಾಜಕೀಯ ಪಕ್ಷವಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಮದ್ರಾಸ್ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ಟಿವಿಕೆ ನೋಂದಾಯಿತ ರಾಜಕೀಯ ಪಕ್ಷವಲ್ಲ, ಹಾಗಾಗಿ ಪಕ್ಷದ ಮಾನ್ಯತೆ ರದ್ದುಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೈಕೋರ್ಟ್ ಗೆ ಚುನಾವಣಾ ಆಯೋಗ ತಿಳಿಸಿದೆ. ತಮಿಳುನಾಡಿನ ಕರೂರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಅವರ ಟಿವಿಕೆ ಪಕ್ಷದ ಮಾನ್ಯತೆ ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗೆ ಚುನಾವಣಾ ಆಯೋಗ ಉತ್ತರ ನೀಡಿದೆ.
ಟಿವಿಕೆ ಪಕ್ಷದ ಮಾನ್ಯತೆ ರದ್ದು ಕೋರಿ ಸಿ. ಸೆಲ್ವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಂ.ಎಂ. ಶ್ರೀ ವಾಸ್ತವ್ ಹಾಗೂ ನ್ಯಾಯಮೂರ್ತಿ ಅರುಣ್ ಮುರುಗನ್ ಅವರ ಪೀಠದ ಮುಂದೆ ನಡೆದಿದ್ದು, ಚುನಾವಣಾ ಆಯೋಗದ ಪರವಾಗಿ ಹಾಜರಾದ ವಕೀಲ ನಿರಂಜನ್ ರಾಜಗೋಪಾಲ್, ಪ್ರಸ್ತುತ ಟಿವಿಕೆ ನೋಂದಾಯಿತ ರಾಜಕೀಯ ಪಕ್ಷಗಳ ಪಟ್ಟಿಯಲ್ಲಿ ಇಲ್ಲ. ಮಾನ್ಯತೆಯನ್ನು ರದ್ದುಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.