ಹಾಸನ: ಹಾಸನಾಂಬೆ ದರ್ಶನದ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಗೌರ ತೋರಿ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಹಾಸನಾಂಬ ದೇವಾಲಯದ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಶಾಸಕ ಸ್ವರೂಪ್ ಪ್ರಕಾಶ್ ಹಾಗೂ ಎ.ಮಂಜು ನೇತೃತ್ವದಲ್ಲಿ ಹಾಸನಾಂಬ ದೇವಾಲಯದ ಎದುರು ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲಾಡಳಿತದ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ, ಕೇಂದ್ರ ಸಚಿವ ಕುಮಾರಸ್ವಾಮಿ ಹಾಸನಾಂಬೆ ದರ್ಶನಕ್ಕೆ ಬಂದಾಗ ಜಿಲ್ಲಾಡಳಿತ ಶಿಷ್ಠಾರ ಪಾಲನೆಯಲ್ಲಿ ಅಗೌರವ ತೋರಿದೆ. ಈ ಮೂಲಕ ತಾತ್ಸಾರ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಈ ಕ್ರಮ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಎಸ್ ಪಿ ಸ್ಥಳಕ್ಕಾಗಮಿಸಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರೂ ಕೇಳದ ಜೆಡಿಎಸ್ ಕಾರ್ಯಕರ್ತರು, ಜಿಲ್ಲಾಧಿಕಾರಿ ಸ್ಥಳಕ್ಕಾಗಮಿಸಿ ವಿವರಣೆ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಹರಸಾಹಸ ಪಡುತ್ತಿದ್ದಾರೆ. ಒಂದೆಡೆ ಹಾಸನಾಂಬೆ ದರ್ಶನಕ್ಕಾಗಿ ಲಕ್ಷಾಂತರ ಜನರು ದೇವಸ್ಥಾನಕ್ಕೆ ಆಗಮಿಸಿದ್ದು, ಕೀ.ಮೀ ಗಟ್ಟೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಇದೇ ವೇಳೆ ಜೆಡಿಎಸ್ ನಾಯಕರು ದೇವಾಲಯದ ಬಳಿ ಪ್ರತಿಭಟನೆ ಮೂಲಕ ಹೈಡ್ರಾಮಾ ಮಾಡುತ್ತಿದ್ದಾರೆ.