ಬೆಂಗಳೂರು: ಬಿಜೆಪಿ -ಜೆಡಿಎಸ್ ಸಮನ್ವಯ ಸಮಿತಿ ರಚಿಸಲು ಯೋಜಿಸಲಾಗಿದೆ. ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಸಮಿತಿ ರಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದ ವಿಜಯೇಂದ್ರ ಮಾತನಾಡಿ, ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತಂತೆ ಭೇಟಿಯ ವೇಳೆ ಚರ್ಚೆ ನಡೆದಿದೆ. ಬಿಜೆಪಿ -ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಬಗ್ಗೆ ಚರ್ಚಿಸಿ ಸಲಹೆ ಪಡೆದುಕೊಂಡಿದ್ದೇನೆ ಎಂದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಚುನಾವಣೆಗಳು ನಡೆಯಲಿದ್ದು, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ ರಚಿಸಿ, ರಾಜ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಮನ್ವಯ ಸಮಿತಿ ರಚಿಸುವಂತೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. 8- 10 ದಿನಗಳಲ್ಲಿ ಹೆಸರು ಕಳುಹಿಸುವುದಾಗಿ ಹೇಳಿದ್ದಾರೆ. ಬಿಜೆಪಿ -ಜೆಡಿಎಸ್ ಪಕ್ಷಗಳ ಎರಡು ಸಮನ್ವಯ ಸಮಿತಿ ರಚಿಸಲು ಯೋಜಿಸಲಾಗಿದೆ ಎಂದು ವಿಜಯೇಂದ್ರ ಮಾಹಿತಿ ನೀಡಿದ್ದಾರೆ.