ಬೆಂಗಳೂರು: ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಮೂರು ದಿನದಲ್ಲಿ ವರದಿ ನೀಡಲಿದೆ. ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ 2033ರವರೆಗೆ ನಿರ್ಬಂಧವಿದೆ. ಈಗಿನಿಂದಲೇ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಿದ್ಧತೆ ನಡೆಸಿದಲ್ಲಿ 2033ರ ವೇಳೆಗೆ ಪ್ರಕ್ರಿಯೆ ಪೂರ್ಣಗೊಳಿಸಬಹುದು. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕನಿಷ್ಠ 5 -6 ವರ್ಷಗಳು ಬೇಕಾಗುತ್ತದೆ. ಹೀಗಾಗಿ ಈಗಿನಿಂದಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಪರಿಶೀಲಿಸಿರುವ ಸ್ಥಳಗಳ ಪೈಕಿ ಎರಡು ಸ್ಥಳಗಳಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಹಸಿರು ನಿಶಾನೆ ತೋರಿಸುವ ನಿರೀಕ್ಷೆ ಇದೆ. ಪ್ರಾಧಿಕಾರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಂತಿಮಗೊಳಿಸುವ ಸ್ಥಳದಲ್ಲಿ ಐದರಿಂದ ಆರು ಸಾವಿರ ಎಕರೆ ಭೂಮಿ ನಿಗದಿ ಮಾಡಲಾಗುವುದು. ಅಂತಿಮವಾಗಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಸಂಸ್ಥೆಗಳು ಆರ್ಥಿಕವಾಗಿ ಲಾಭದಾಯಕವೇ ಎನ್ನುವ ಅಂಶ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.
ದೆಹಲಿ, ಮುಂಬೈ ಮಹಾನಗರಗಳು ಈಗಾಗಲೇ ಎರಡು ವಿಮಾನ ನಿಲ್ದಾಣ ಹೊಂದಿವೆ. ಆ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಿದ ಸಂಸ್ಥೆಗಳೊಂದಿಗೆ ಮಾತನಾಡಲಾಗಿದೆ. ತಮಿಳುನಾಡು ಸರ್ಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುತ್ತಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.
