ಬಾಗಲಕೋಟೆ: ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ನಡೆದು ಹೋಗುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘೋರ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆಯ ನವನಗರದ 49ನೇ ಸೆಕ್ಟರ್ ನಲ್ಲಿ ಈ ದುರಂತ ಸಂಭವಿಸಿದೆ. ರಾಜಸ್ಥಾನ ಮೂಲದ ವ್ಯಕ್ತಿ ರಸ್ತೆಬದಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಕರೆಂಟ್ ಶಾಕ್ ಗೆ ವ್ಯಕ್ತಿಯ ದೇಹ ಸುಟ್ಟು ಹೋಗಿದೆ.
ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
