ಉಡುಪಿ: ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತವುಂಟಾಗಿದ್ದು, ಲಕ್ಷ ದ್ವೀಪದ ಸಮೀಪ ವಾಯುಭಾರ ಕುಸಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬಿರುಗಾಳ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಉಡುಪಿ ಜಿಲ್ಲೆಗೆ ಹೈ ಅಲರ್ಟ್ ಘೋಷಿಸಲಾಗಿದೆ. ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಳ್ಳಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕಾ ಬೋಟ್ ಗಳು ಮಲ್ಪೆ ಬಂದರಿನತ್ತ ಮುಖ ಮಾಡಿವೆ.
ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಗೋವಾ ಸೇರಿದಂತೆ ಹಲವು ರಾಜ್ಯಗಳ ಬೋಟ್ ಗಳು ಉಡುಪಿಯ ಮಲ್ಪೆ ಬಂದರಿಗೆ ಬಂದಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಇದೇ ಬಂದರಿನಲ್ಲಿ ಲಂಗರು ಹಾಕಲಾಗುತ್ತಿದೆ.
