ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿರುವಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ನವೆಂಬರ್ 11ರಂದು ಮತ್ತೆ ದೆಹಲಿಗೆ ಭೇಟಿ ನೀಡುತ್ತಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ನಿನ್ನೆ ದೆಹಲಿ ಭೇಟಿ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಗೆ ಸಮಯಾವಕಾಶ ಸಿಕ್ಕಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 11 ರಂದು ಮತ್ತೆ ದೆಅಹಲಿ ಪ್ರವಾಸ ಕೈಗೊಳ್ಳಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದು, ಪ್ರತ್ಯೇಕ ಮಾತುಕತೆಗೆ ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ.
ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ ತೀವ್ರ ಕುತೂಹಲ ಮೂಡಿಸಿದ್ದು, ಹಲವು ವಿಷಯಗಳನ್ನು ಚರ್ಚಿಸುವ ಸಾಧ್ಯತೆ ಇದೆ. ಈ ನಡುವೆ ಕಾಂಗ್ರೆಸ್ ಸಚಿವರು, ಶಾಸಕರಿಗೆ ನವೆಂಬರ್ 11ರವರೆಗೆ ಮೌನವಾಗಿರುವಂತೆ, ಬಹಿರಂಗ ಹೇಳಿಕೆಗಳನ್ನು ನೀಡದಂತೆ ಡಿಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ.
