ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ‘ಮೋಂಥಾ’ ಚಂಡಮಾರುತ ಸೋಮವಾರ ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದೆ. ಸೋಮವಾರ ಸಂಜೆಯಿಂದಲೇ ತೀವ್ರಗೊಂಡಿರುವ ಚಂಡಮಾರುತದಿಂದಾಗಿ ಆಂಧ್ರಪ್ರದೇಶ, ತಮಿಳುನಾಡು, ಒಡಿಶಾ, ಕರ್ನಾಟಕ ಭಾಗದಲ್ಲಿ ಮಳೆಯಾಗುತ್ತಿದೆ.
ಮಂಗಳವಾರ ಸಂಜೆಯ ವೇಳೆಗೆ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡು ಮಚಲಿಪಟ್ಟಣ-ಕಾಕಿನಾಡ ಪಟ್ಟಣದ ನಡುವೆ ಹಾದು ಹೋಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಚಂಡಮಾರುತ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಒಡಿಶಾದಲ್ಲಿ ಶಾಲೆಗಳಿಗೆ ಮೂರು ದಿನ ರಜೆ ನೀಡಲಾಗಿದೆ. ರೈಲು ಮತ್ತು ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ. ಒಡಿಶಾ ಕರಾವಳಿಯ ಎಂಟು ಜಿಲ್ಲೆಯ ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ರಾಷ್ಟ್ರೀಯ, ರಾಜ್ಯ ವಿಪತ್ತು ನಿರ್ವಹಣಾ ತಂಡಗಳು, ಅಗ್ನಿಶಾಮಕ ದಳಗಳನ್ನು ಮುನ್ನೆಚ್ಚರಿಕೆಯಾಗಿ ನಿಯೋಜಿಸಲಾಗಿದೆ.
