ರಾಜ್ಯ ಕಾಂಗ್ರೆಸ್ ಅಧಿಕಾರ ರಾಜಕಾರಣದ ಸಂಘರ್ಷದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಸಾಫ್ಟ್ ಹೇಳಿಕೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಹೈಕಮಾಂಡ್ ನಿರ್ಧರಿಸಿದರಷ್ಟೇ ತಾವು ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿ ಮುಂದುವರೆಯುವುದಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ. ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ ಎಂದು ಹೇಳಿದ್ದಾರೆ.
ಇದರ ನಡುವೆ ಸಿದ್ದರಾಮಯ್ಯ ಅಧಿಕಾರ ಪೂರ್ಣಗೊಳಿಸಲಿದ್ದಾರೆ ಎನ್ನುವ ಬೆಂಬಲಿಗರ ಹೇಳಿಕೆಗಳ ನಡುವೆ ದಲಿತರಿಗೂ ಅವಕಾಶ ನೀಡಬೇಕೆಂಬ ಹಕ್ಕೊತ್ತಾಯ ಪ್ರಮುಖವಾಗಿ ಕೇಳಿ ಬಂದಿದೆ.
ಕೆಲವು ತಿಂಗಳ ಹಿಂದೆಯಷ್ಟೇ ದೆಹಲಿಯ ಹೈಕಮಾಂಡ್ ಅಂಗಳದಲ್ಲಿ ನಿಂತು ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎಂದು ಸ್ಪಷ್ಟವಾಗಿ ಹೇಳಿದ್ದ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಹೈಕಮಾಂಡ್ ತೀರ್ಮಾನಿಸಿದರಷ್ಟೇ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ, ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾದದ್ದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎಂದು ಹೇಳಿದ ನಂತರವೂ ಡಿಸಿಎಂ ಡಿಕೆ ಬೆಂಬಲಿಗರು ಅಧಿಕಾರ ಹಂಚಿಕೆ ಸೂತ್ರದ ವಿಚಾರ ಜೀವಂತವಾಗಿರುವಂತೆ ನೋಡಿಕೊಂಡಿದ್ದರು. ಇದರಿಂದಾಗಿ ಕಾಂಗ್ರೆಸ್ ನಲ್ಲಿ ಸಿಎಂ ಮತ್ತು ಡಿಸಿಎಂ ಬಣಗಳ ನಡುವೆ ಹೇಳಿಕೆ, ಪ್ರತಿ ಹೇಳಿಕೆಗಳ ಶೀತಲ ಸಮರವೇ ಶುರುವಾಗಿತ್ತು. ನವೆಂಬರ್ ನಲ್ಲಿ ಕ್ರಾಂತಿ ಖಚಿತವೆಂದು ಹೇಳಲಾಗಿತ್ತು.
ಇದೀಗ ಸಿದ್ದರಾಮಯ್ಯ ಸಾಫ್ಟ್ ಹೇಳಿಕೆ ನೀಡಿರುವುದು ಮತ್ತು ಅದಕ್ಕೆ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿರುವುದು ನವೆಂಬರ್ ಕ್ರಾಂತಿಯ ಬಗ್ಗೆ ಕಾಂಗ್ರೆಸ್ ನಲ್ಲಿ ಮಾತ್ರವಲ್ಲ, ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.
