BIG NEWS: ಕೇವಲ ಕ್ಯಾಪ್ ಬದಲಾಗುವುದಲ್ಲ; ಕಾರ್ಯಕ್ಷಮತೆಯೂ ಬದಲಾಗಲಿ: ಪೊಲೀಸ್ ಸಿಬ್ಬಂದಿಗಳಿಗೆ ಸಿಎಂ ಕರೆ

ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ನಾನೇ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ ಎಂದರು.

ಕೇವಲ ಕ್ಯಾಪ್ ಬದಲಾಗುವುದಲ್ಲ. ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ ಎಂದು ಇದೇ ವೇಳೆ ಪೊಲೀಸ್ ಸಿಬ್ಬಂದಿಗಳಿಗೆ ಕರೆ ನೀಡಿದರು. ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ ಮತ್ತು ಸಾಮರ್ಥ್ಯ ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ದ ನಿಲುವು ತಳೆಯಬೇಕು ಎಂದರು.

ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಸಾಧ್ಯ ಮಾಡಿದರೆ ಕರ್ನಾಟಕ ಪೊಲೀಸ್ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ ಎಂದರು.

ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ನಿಮ್ಮಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಂಡರೆ ಉತ್ತರ ನಿಮಗೇ ಗೊತ್ತಿರುತ್ತದೆ ಎಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಆತ್ಮಸಾಕ್ಷಿಯನ್ನು ಕೆದಕಿದರು.

ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ನಿಮಗೇ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, “ಡ್ರಗ್ ಮುಕ್ತ ಕರ್ನಾಟಕ” ಆಗಲಿ, ಮಾಡಿ ತೋರಿಸಿ ಎಂದು ಕರೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read