ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಬೋಧನಾ ಅರ್ಹತೆಗಾಗಿ ಭಾನುವಾರ ಕೆ- ಸೆಟ್ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ.
ಬೆಂಗಳೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಈ ಬಾರಿ ಕೆ -ಸೆಟ್ ಪರೀಕ್ಷೆಯಲ್ಲಿ ಮುಖ ಚಹರೆ ಪತ್ತೆ ತಂತ್ರಜ್ಞಾನ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುವುದು. ಈ ಹಿಂದಿನ ಎಲ್ಲಾ ಪರೀಕ್ಷೆಗಳಲ್ಲಿ ಇದ್ದಂತೆ ವಸ್ತ್ರ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕಿದೆ. ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ.
ಒಟ್ಟು 33 ವಿಷಯಗಳಿಗೆ ನಡೆಯಲಿರುವ ಕೆ-ಸೆಟ್ ಪರೀಕ್ಷೆಗಾಗಿ 1.36 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ
ನ.02 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಕೆ-ಸೆಟ್-2025 ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶ ಎಂದು ಘೋಷಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.
