ಉಡುಪಿ: ಉಡುಪಿ ಜಿಲ್ಲೆ ಮಲ್ಪೆ ಪೊಲೀಸ್ ಠಾಣೆಯ ಎಎಸ್ಐ ವಿಶ್ವನಾಥ್(58) ಕಾರ್ಯಕ್ರಮವೊಂದರಲ್ಲಿ ಹಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ ಘಟನೆ ನಡೆದಿದೆ.
ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅಲ್ಲಿ ಎಎಸ್ಐ ವಿಶ್ವನಾಥ್ ಭಾಗವಹಿಸಿ ಹಾಡುತ್ತಿದ್ದಾಗ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಹೃದಯಾಘಾತದಿಂದ ವಿಶ್ವನಾಥ್ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಪೊಲೀಸ್ ಘಟಕದಲ್ಲಿ ಕಳೆದ 32 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಮಲ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ASI ವಿಶ್ವನಾಥ್ ಅವರು ಹೃದಯಾಘಾತದಿಂದ ಮರಣ ಹೊಂದಿರುತ್ತಾರೆ.ಅವರ ಕುಟುಂಬದವರಿಗೆ ಬಂಧು ಮಿತ್ರರಿಗೆ ದುಃಖ ಭರಿಸುವ ಶಕ್ತಿ ದೊರೆಯಲೆಂದು ಪ್ರಾರ್ಥಿಸುತ್ತಾ ಮೃತರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಅರ್ಪಿಸುತ್ತೇವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
