ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಎಲ್ಲಾ ಐದು ಪಾಲಿಕೆಗಳ ಕ್ಷೇತ್ರ ಪುನರ್ ವಿಂಗಡಣೆಗೆ ಅಂತಿಮ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ 15 ದಿನ ಕಾಲಾವಕಾಶ ನೀಡಿದೆ.
ಜೆಬಿಎ ಚುನಾವಣೆ ಸಂಬಂಧ ಕಾಂಗ್ರೆಸ್ ಮುಖಂಡ ಎಂ. ಶಿವರಾಜು ಮತ್ತು ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್, ಉಜ್ವಲ್ ಭುಯಾನ್ ಮತ್ತು ಜೋಯ್ ಮಲ್ಯ ಭಾಗ್ವಿ ನೇತೃತ್ವದ ತ್ರಿಸದಸ್ಯ ಪೀಠದಿಂದ 15 ದಿನ ಕಾಲಾವಕಾಶ ನೀಡಲಾಗಿದೆ.
ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಅಧಿಕಾರಿಗಳನ್ನು ನೇಮಕ ಮಾಡಿದ್ದರಿಂದ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಅಧಿಸೂಚನೆ ಪ್ರಕಟಿಸಿಲ್ಲ. ಈಗ ಎಲ್ಲಾ ಸಿದ್ಧತೆಗಳಾಗಿದ್ದು ನವೆಂಬರ್ 15ರೊಳಗೆ ಕ್ಷೇತ್ರ ಪುನರ್ ವಿಂಗಡಣೆ ಅಂತಿಮ ಅಧಿಸೂಚನೆ ನಂತರ ಡಿಸೆಂಬರ್ 15ರೊಳಗೆ ವಾರ್ಡ್ ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯ ಚುನಾವಣಾ ಆಯೋಗವನ್ನು ಪ್ರತಿನಿಧಿಸಿದ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಂಡಿಸಿ ಆಯೋಗವು ಚುನಾವಣಾ ಪ್ರಕ್ರಿಯೆ ಆರಂಭಿಸಿದ್ದು, ಜಿಲ್ಲಾ ಮತ್ತು ಹೆಚ್ಚುವರಿ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಆದರೂ ಚುನಾವಣೆ ನಡೆಸಲು ಆಯೋಗಕ್ಕೆ ಎರಡರಿಂದ ಮೂರು ತಿಂಗಳು ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಅರ್ಜಿದಾರರ ಪರವಾಗಿ ಎಲ್ಲರೂ ವಾದ ಮಂಡಿಸಿ ಬಿಬಿಎಂಪಿಗೆ ಚುನಾವಣೆ ನಡೆದು ಅನೇಕ ವರ್ಷಗಳಾಗಿವೆ. ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆಕ್ಷೇಪಿಸಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಪೀಠ, ಕ್ಷೇತ್ರ ಪುನರ್ ವಿಂಗಡಣೆಗೆ ಅಂತಿಮ ಆದೇಶ ಪ್ರಕಟಿಸಲು ನವೆಂಬರ್ 15 ರವರೆಗೆ, ವಾರ್ಡ್ ಮೀಸಲಾತಿ ಪ್ರಕಟಿಸಲು ಡಿಸೆಂಬರ್ 15 ರವರೆಗೆ ರಾಜ್ಯ ಸರ್ಕಾರಕ್ಕೆ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿದೆ.
