ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ-1ರ ನೋಂದಣಿಗೆ ನೀಡಲಾಗಿದ್ದ ಕಾಲಾವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.
ಅಭ್ಯರ್ಥಿಗಳಿಗೆ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೊದಲು ಅ.31ರವರೆಗೆ ಕಾಲಾವಕಾಶ ನೀಡಲಾಗಿತ್ತು. ಅ. 18ರವರೆಗೆ ಶಾಲೆಗಳಿಗೆ ರಜೆ ಇದ್ದ ಕಾರಣ ಕೆಲವು ಶಾಲೆಗಳು, ಪೋಷಕರು ಸಮಯ ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಗಡುವನ್ನು ನ.15 ರವರೆಗೆ ವಿಸ್ತರಿಸಲಾಗಿದೆ.
2026ರ ಮಾರ್ಚ್ ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿದೆ. ಪರೀಕ್ಷೆ ಬರೆಯಲು ಬಯಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳು, ಆನ್ಲೈನ್ ಮೂಲಕ ನೇರವಾಗಿ ನೋಂದಾಯಿಸುವ ಖಾಸಗಿ ಅಭ್ಯರ್ಥಿಗಳು ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳುವಂತೆ ತಿಳಿಸಲಾಗಿದೆ.
