ಬೆಂಗಳೂರು: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಸ್ವರೂಪ ಪಡೆದುಕೊಂಡಿದ್ದು, ಟನ್ ಕಬ್ಬಿಗೆ 3500 ರೂಪಾಯಿ ನಿಗದಿ ಮಾಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಈ ನಡುವೆ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಯಿತು.
ವಿಧಾನಸೌಧದ ಸಮ್ಮೇಳನಸಭಾಂಗಣದಲ್ಲಿ ರಾಜ್ಯದ ಸಂಸದರು, ರಾಜ್ಯಸಭೆ ಸದಸ್ಯರು ಹಾಗೂ ಸಕ್ಕರೆ ಕಾರ್ಖಾನೆ ಮುಖ್ಯಸ್ಥರ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಿದರು. ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾದವು. ಸರ್ಕಾರದ ಬೇಡಿಕೆಯನ್ನು ಸಕ್ಕರೆ ಕಾರ್ಖಾನೆ ಮಾಲೀಕರು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಟನ್ ಕಬ್ಬಿಗೆ 3200ರೂಪಾಯಿ ಜೊತೆ 200ಪಾಯಿ ಸೇರಿಸಿ ರೈತರಿಗೆ ಕೊಡುವಂತೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ, ಇದಕ್ಕೆ ಸಕ್ಕರೆ ಕಾರ್ಖಾನೆ ಮಾಲೀಕರು ನಿರಾಕರಿಸಿದ್ದಾರೆ. ಸದ್ಯ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗಿನ ಸಭೆ ಮುಕ್ತಾಯವಾಗಿದೆ. ಕೆಲವೇ ಕ್ಷಣಗಳಲ್ಲಿ ಕಬ್ಬು ಬೆಳೆಗಾರರು ಹಾಗೂ ರೈತ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
