ಮಡಿಕೇರಿ: ಪೊನ್ನಂಪೇಟೆಯಲ್ಲಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾ ಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಕೃಷ್ಣ ಬೈರೇಗೌಡ ಅವರು, ಈ ಹಿಂದೆ ಸರ್ಕಾರ 63 ಹೊಸ ತಾಲ್ಲೂಕುಗಳನ್ನು ಪ್ರಕಟಿಸಿತ್ತು, ಅದರಲ್ಲಿ ಪೊನ್ನಂಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಾಗಿ ಸೇರ್ಪಡೆಗೊಂಡಿದ್ದವು, ಆ ಸಂದರ್ಭದಲ್ಲಿ 14 ಹೊಸ ತಾಲ್ಲೂಕುಗಳಲ್ಲಿ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ 2 ವರ್ಷದಲ್ಲಿ, 49 ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಮಂಜೂರಾತಿ ನೀಡಿ ಆದೇಶಿಸಿದೆ ಎಂದು ತಿಳಿಸಿದರು.
ಹೊಸ ತಾಲ್ಲೂಕುಗಳಲ್ಲಿ ಪ್ರತೀ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಸರ್ಕಾರ ತಲಾ 8.60 ಕೋಟಿ ರೂ.ವನ್ನು ಬಿಡುಗಡೆ ಮಾಡಿದ್ದು, ಎಲ್ಲೆಡೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಮೂಲ ಸೌಲಭ್ಯ ಕಲ್ಪಿಸಲು ಒತ್ತು ನೀಡಿದೆ. ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಗಮನಹರಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ತಾಲ್ಲೂಕು ದಂಡಾಧಿಕಾರಿಯವರು ಕರ್ತವ್ಯ ನಿರ್ವಹಿಸುವ ಕಚೇರಿ ಸಾರ್ವಜನಿಕರ ಕಚೇರಿಯಾಗಿದ್ದು, ಅಂತಹ ಸರ್ಕಾರಿ ಕಚೇರಿಗೆ ಸಾರ್ವಜನಿಕರು ಹೋಗಬೇಕು ಎಂಬ ಭಾವನೆ ಜನರಲ್ಲಿ ಇರಬೇಕು. ಆ ನಿಟ್ಟಿನಲ್ಲಿ ಸರ್ಕಾರ ಸುಸಜ್ಜಿತ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಮುಂದಾಗಿದೆ ಎಂದರು.
ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಿ ಎಲ್ಲಾ ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಲಾಗಿತ್ತು. ಅದರಂತೆ ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದ್ದಾರೆ. ಕಳೆದ ಎರಡು ವರ್ಷದಲ್ಲಿ 49 ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ಜನರ ಮನಸ್ಸಿನ ಆಸೆ ಈಡೇರಿದಂತಾಗಿದೆ ಎಂದರು.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಪಟ್ಟೆದಾರರ ಭೂಮಿಗೆ ಪರಿಹಾರ ಹುಡುಕಲು ಪ್ರಮಾಣಿಕ ಪ್ರಯತ್ನ ಮಾಡಲಾಗಿದೆ. ಹಾಗೆಯೇ ಸಿ ಮತ್ತು ಡಿ ಭೂಮಿ ಸಂಬಂಧಿಸಿದಂತೆ ಸುಪ್ರಿಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗುವುದು. ಆ ನಿಟ್ಟಿನಲ್ಲಿ ರೈತರು ಸಹ ಕೈಜೋಡಿಸಬೇಕು ಎಂದು ಸಚಿವರು ಮನವಿ ಮಾಡಿದರು.
ಸಿ ಮತ್ತು ಡಿ ಭೂಮಿ ಪರಿಹಾರ ಸಂಬಂಧ ತಜ್ಞರ ಸಮಿತಿ ರಚಿಸಿ ಅವರ ವರದಿ ತರಿಸಿಕೊಂಡು ಮುಂದಿನ ಕ್ರಮವಹಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವರು ಹೇಳಿದರು.
ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ, ಸರ್ಕಾರ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. ಪ್ರಜಾಸೌಧ ಆಡಳಿತ ಭವನವನ್ನು ದೂರದೃಷ್ಟಿಯಿಂದ ನಿರ್ಮಾಣ ಮಾಡಲಾಗುತ್ತದೆ. ಸರ್ಕಾರ ಗ್ಯಾರಂಟಿ ಯೋಜನೆ ಜೊತೆಗೆ ಮೂಲ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿವೆ ಎಂದು ಹೇಳಿದರು.
ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಪ್ರಮುಖರಾದ ಹೆಚ್.ಡಿ.ಗಣೇಶ್, ಕೃಷ್ಣಪ್ಪ, ಅಬ್ದುಲ್ಲಾ ಇತರರು ಇದ್ದರು.
