ನವದೆಹಲಿ: ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣದಲ್ಲಿ 12 ಜನ ಅಮಾಯಕರು ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಕೃತ್ಯದ ಹಿಂದೆ ಉಗ್ರರ ಕೈವಾಡ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ತನಿಖೆ ಚುರುಕುಗೊಂಡಿದೆ. ದೆಹಲಿ ಸ್ಫೋಟದ ಬೆನ್ನಲ್ಲೇ ದೇಶಾದ್ಯಂತ ಕಟ್ಟೆಚ್ಚರ ಘೋಷಿಸಲಾಗಿದೆ. ಈ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಚರ್ಚೆ ನಡೆಸಿದ್ದಾರೆ.
ಪ್ರಸ್ತುತ ವಿದೇಶ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿದ್ದು, ದೆಹಲಿ ಸ್ಫೋಟದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ ಸದ್ಯದ ಪರಿಸ್ಥಿತಿ ಬಗ್ಗೆಯೂ ವಿಚಾರಿಸಿದ್ದಾರೆ.
ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದ್ರತಾ ಪಡೆಗಳ ಹಿರಿಯ ಅಧಿಕಾರಿಗಳ ಉನ್ನತಮಟ್ಟದ ಸಭೆ ನಡೆಯಲಿದೆ. ಸಭೆಯಲ್ಲಿ ದೇಶದ ಭದ್ರತೆ ವಿಚಾರವಾಗಿ ಮಹತ್ವದ ಚರ್ಚೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭದ್ರತಾಪಡೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
