ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ತಮಿಳುನಾಡು ಅರ್ಜಿಯನ್ನು ವಜಾಗೊಳಿಸಿದೆ.
ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಬಹುದೊಡ್ಡ ಗೆಲುವು ಸಿಕ್ಕಿದೆ. ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಿಯುಂಟುಮಾಡಿತ್ತು. ಅಲ್ಲದೇ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಯೋಜನೆ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೇಕೆದಾಟು ಯೋಜನೆ ಇನ್ನೂ ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ತಿಳಿಸಿದೆ. ತಮಿಳುನಾಡು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
