ಬೆಂಗಳೂರು : ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಬಿಗ್ ಶಾಕ್ ಎದುರಾಗಿದ್ದು, ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ನ್ಯಾ.ಎಂಐ ಅರುಣ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.
ಕಾಗ್ನಿಜೆನ್ಸ್ ಪಡೆದು ಸಮನ್ಸ್ ನೀಡಿದ ಕ್ರಮ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಹೈಕೋರ್ಟ್ ಸೂಚನೆ ನೀಡಿದೆ. ಬಿಎಸ್ವೈ ಖುದ್ದು ಹಾಜರಾತಿಯಿಂದ ವಿನಾಯಿತಿಗೆ ಅರ್ಜಿ ಸಲ್ಲಿಸಬಹುದು. ಅಂತಹ ಮನವಿಯನ್ನು ಪರಿಗಣಿಸಲು ತ್ವರಿತ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಫೆ.18 ರಂದು ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಈಗ ದಿನಾಂಕ ನಿಗದಿಪಡಿಸಿ ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಲಿದೆ.
ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ನಂತರ ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
