ಬೆಂಗಳೂರು: ಮೇಕೆದಾಟು ಯೋಜನೆ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡು, ಪುದುಚೇರಿಗೂ ಸಂದ ಜಯವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮೇಕೆದಾಟು ಯೋಜನೆ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಉಪಯೋಗವಾಗುತ್ತದೆ. ಕಷ್ಟಕಾಲದಲ್ಲಿ ಅವರ ಪಾಲಿನ ನೀರು ಬಿಡಲು ಈ ಯೋಜನೆ ನೆರವಾಗುತ್ತದೆ. ಹೀಗಾಗಿ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯಕ್ಕೆ ಮಾತ್ರವಲ್ಲ ತಮಿಳುನಾಡು, ಪುದುಚೇರಿಗೂ ಸಂದ ಜಯವಾಗಿದೆ ಎಂದು ಜಲ ಸಂಪನ್ಮೂಲ ಸಚಿವರು ಆಗಿರುವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರಿನ ಬಳಕೆಗಾಗಿ ನಮ್ಮ ನೀರು ನಮ್ಮ ಹಕ್ಕು ಹೋರಾಟ ನಡೆಸಲಾಗಿತ್ತು. ರಾಜ್ಯದ ಜನ ನಮ್ಮ ಕೈಗೆ ಅಧಿಕಾರ ನೀಡಿದರು. ಅಧಿಕಾರಕ್ಕೆ ಬಂದ ನಂತರ ಕಾನೂನು ಹೋರಾಟ ಮಾಡಿದೆವು. ತಮಿಳುನಾಡಿನವರು ಯೋಜನೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್ ವಿಶೇಷ ಪೀಠ ವಿಚಾರಣೆ ನಡೆಸಿ ಇಂದು ತೀರ್ಪು ಪ್ರಕಟಿಸಿದೆ ಎಂದು ಹೇಳಿದ್ದಾರೆ.
ಈ ವಿಚಾರ ನ್ಯಾಯಾಲಯದಲ್ಲಿ ತೀರ್ಮಾನ ಮಾಡುವ ವಿಚಾರವಲ್ಲ, ಕರ್ನಾಟಕ ರಾಜ್ಯವು ತಮಿಳುನಾಡಿನ ಪಾಲಿನ 177 ಟಿಎಂಸಿ ನೀರು ಬಿಡಲೇಬೇಕು ಎಂದು ನಿರ್ದೇಶನ ನೀಡಿ ತಮಿಳುನಾಡಿನ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂಕೋರ್ಟಿನ ಮಾರ್ಗದರ್ಶನಕ್ಕೆ ನಾವು ಬದ್ಧರಾಗಿದ್ದೇವೆ. ಕರ್ನಾಟಕದಲ್ಲಿ ಅಣೆಕಟ್ಟು ನಿರ್ಮಿಸುವ ಯೋಜನೆ ಮುಂದುವರಿಸುತ್ತೇವೆ. ಕೇಂದ್ರ ಜಲ ಆಯೋಗ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎಲ್ಲ ತೀರ್ಮಾನ ಕೈಗೊಳ್ಳಬೇಕಿದೆ ಎಂದು ನ್ಯಾಯಾಲಯ ಸೂಚಿಸಿದೆ. ಹೀಗಾಗಿ ಮತ್ತೆ ನ್ಯಾಯಾಲಯದ ಮುಂದೆ ಹೋಗುವ ಪ್ರಶ್ನೆ ಉದ್ಭವಿಸುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಯೋಜನೆಗೆ ಅಗತ್ಯ ಇಲಾಖೆಗಳಿಂದ ಅನುಮತಿ ಪಡೆಯಲಾಗುವುದು ಎಂದು ಹೇಳಿದ್ದಾರೆ.
