ಬೆಂಗಳೂರು: ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗುವುದು. ಮುಂದಿನ ಶೈಕ್ಷಣಿಕ ಸಾಲಿನಿಂದ ಪುಸ್ತಕ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಹೌದು, ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನೀಡುವ ರೀತಿಯಲ್ಲಿ ಇನ್ನೂ ಮುಂದೆ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ವಿತರಿಸಲಾಗುವುದು.
2026 -27ನೇ ಸಾಲಿನ ಮುಂದಿನ ಶೈಕ್ಷಣಿಕ ವರ್ಷದಿಂದ ಯೋಜನೆ ಅನುಷ್ಠಾನಗೊಳಿಸಲು ಶಾಲಾ ಶಿಕ್ಷಣ ಇಲಾಖೆಯ ಸಿದ್ಧತೆ ನಡೆಸಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಸುಮಾರು 15 ಲಕ್ಷ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗುತ್ತದೆ.
ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳ, ಗುಣಮಟ್ಟದ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಇಲಾಖೆಯಿಂದ ಅನೇಕ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ನೀಡಲಾಗುತ್ತಿದ್ದ ಉಚಿತ ಪಠ್ಯಪುಸ್ತಕ ಯೋಜನೆಯನ್ನು ದ್ವಿತೀಯ ಪಿಯುಸಿವರೆಗೂ ವಿಸ್ತರಿಸಲಾಗುವುದು. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರಮ ಕೈಗೊಂಡಿದ್ದು, ಪದವಿಪೂರ್ವ ಕಾಲೇಜುಗಳಿಗೆ 2026 -27 ನೇ ಸಾಲಿನಿಂದ ಉಚಿತ ಪಠ್ಯ ಪುಸ್ತಕ ಯೋಜನೆ ಜಾರಿಗೊಳಿಸಲಾಗುವುದು.
