ಬೆಂಗಳೂರು: ಎಲ್ಲ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಬಿಸಿಯೂಟ ಯೋಜನೆ ವಿಸ್ತರಣೆ ಬಗ್ಗೆ ಸಿಎಂಗೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ಹಿಂದೆ ಎಂಟನೇ ತರಗತಿಯವರೆಗೆ ಇದ್ದ ಯೋಜನೆಯನ್ನು 10ನೇ ತರಗತಿವರೆಗೆ ವಿಸ್ತರಿಸಲಾಗಿದ್ದು, ವಾರದಲ್ಲಿ ಆರು ದಿನ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತಿದೆ. ಮೊಟ್ಟೆ, ಬಾಳೆಹಣ್ಣು ವಿಸ್ತರಣೆಗಾಗಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ 1,500 ಕೋಟಿ ರೂಪಾಯಿ ಅನುದಾನ ನೀಡಿದೆ ಎಂದರು.
ಮುಂಬರುವ ಶೈಕ್ಷಣಿಕ ವರ್ಷದಿಂದ ಕಲೆ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾನೂನು, ಸಿಎ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುವುದು ಎಂದರು.
