ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಆವರಣಕ್ಕೆ ನುಗ್ಗಿ ಕಲ್ಲು ತೂರಾಟ ನಡೆಸಿ ಕಬ್ಬು ತುಂಬಿದ್ದ 96 ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ.
ಒಟ್ಟು 167 ಜನರ ವಿರುದ್ಧ ಕೇಸ್ ದಾಖಲಿಸಿದ್ದು, 10 ರೈತರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ 3500 ರೂ. ನೀಡುವಂತೆ ಆಗ್ರಹಿಸಿ ನವೆಂಬರ್ 13ರಂದು ಮುಧೋಳದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ರೈತರ ಪ್ರತಿಭಟನೆ ನಡುವೆ ರಬಕವಿ- ಬನಹಟ್ಟಿ ತಾಲೂಕಿನ ಸಮೀರವಾಡಿ ಸಕ್ಕರೆ ಕಾರ್ಖಾನೆ ಕಬ್ಬು ನುರಿಯಲು ಆರಂಭಿಸಿತ್ತು. ಇದನ್ನು ವಿರೋಧಿಸಿ ರೊಚ್ಚಿಗೆದ್ದ ರೈತರು 96 ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು, ಕಾರ್ಖಾನೆಗೆ ಮುತ್ತಿಗೆ ಹಾಕಿ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಎಸ್ಪಿ ಮಹಾಂತೇಶ್ವರ ಜಿದ್ದಿ ಸೇರಿ ಹಲವರು ಗಾಯಗೊಂಡಿದ್ದರು.
