ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಸುಳ್ಳು ಅಂಕಿ ಅಂಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ. ದಯಾನಂದ್ ಅವರು ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಜಾತಿವಾರು ಸಮೀಕ್ಷೆಯ ಸುಳ್ಳು ಅಂಕಿ ಅಂಶಗಳನ್ನು ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ.
ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 31ರವರೆಗೆ ಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆಯಲ್ಲಿ ಭಾಗವಹಿಸದವರಿಗೆ ಆನ್ಲೈನ್ ಮೂಲಕ ಭಾಗವಹಿಸಲು ನವೆಂಬರ್ 30ರವರೆಗೆ ಅವಕಾಶ ನೀಡಲಾಗಿದೆ. ಇನ್ನು ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ. ಅಲ್ಲದೆ, ಹೈಕೋರ್ಟ್ ನಲ್ಲಿ ಹಲವು ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದು, ಮಾಹಿತಿ ಸೋರಿಕೆಯಾಗದಂತೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಗೌಪ್ಯತೆ ಕಾಪಾಡಿಕೊಳ್ಳಲಾಗಿದೆ.
ಕೆಲವು ವಾಟ್ಸಾಪ್ ಗ್ರೂಪ್ ಗಳಲ್ಲಿ ಕರ್ನಾಟಕದ ಜಾತಿಗಣತಿ ವರದಿ ಎನ್ನುವ ಶೀರ್ಷಿಕೆಯಡಿ ವಿವಿಧ ಜಾತಿಗಳ ಒಟ್ಟು ಜನಸಂಖ್ಯೆ ನಮೂದಿಸಿ ಹಂಚಿಕೊಳ್ಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಕೃತ್ಯದ ಹಿಂದೆ ಇರುವವರನ್ನು ಪತ್ತೆ ಮಾಡಬೇಕು. ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವ ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಲಾಗಿದೆ.
