ಬೆಂಗಳೂರು: ಬಂಗಾಳ ಕೊಲ್ಲಿಯ ನೈರುತ್ಯ ಭಾಗದ ಶ್ರೀಲಂಕಾ ಕರಾವಳಿ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಹಗುರ ಮಳೆಯಾಗುವ ಸಾಧ್ಯತೆ ಇದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳ ಕೆಲವು ಕಡೆ ನವೆಂಬರ್ 22 ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ.
ವಾಯುಭಾರ ಕುಸಿತವು ಪ್ರಸ್ತುತ ಕೊಮೇರಿಯನ್ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದ್ದು, ನಿಧಾನವಾಗಿ ಪಶ್ಚಿಮ ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ. ನವೆಂಬರ್ 22ರ ಸುಮಾರಿಗೆ ಕಡಿಮೆ ಒತ್ತಡ ಪ್ರದೇಶ ರೂಪಗೊಳ್ಳುವ ಸಾಧ್ಯತೆ ಇದೆ. ಇದರ ಪರಿಣಾಮ ನವೆಂಬರ್ 22 ರವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ರಾತ್ರಿ ವೇಳೆ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ.
