ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಬಹಳಷ್ಟು ನಾಯಕ ಶ್ರಮ, ಪರಿಶ್ರಮವಿದೆ. ಒಬ್ಬರಿಂದಲೇ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಬಹಳಷ್ಟು ನಾಯಕರು, ಶಾಸಕರು, ಕಾರ್ಯಕರ್ತರು ಸೇರಿ ಕೆಲಸ ಮಾಡಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಒಬ್ಬರೇ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆಂದು ಹೇಳಿದರೆ ನಾವು ಒಪ್ಪುವುದಿಲ್ಲ ಎಂದರು.
ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದ್ದು, ಈ ನಡುವೆ ಸಿಎಂ ರೇಸ್ ಗೆ ಹೋಂ ಮಿನಿಸ್ಟರ್ ಪರಮೇಶ್ವರ್ ಕೂಡ ಎಂಟ್ರಿಯಾಗಿದ್ದಾರೆ. ನಾನು ಕೂಡ ಸಿಎಂ ಆಕಾಂಕ್ಷಿ, ಸಿಎಂ ರೇಸ್ ನಲ್ಲಿ ಇದ್ದಿನಿ ಎಂದಿರುವ ಗೃಹ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, ಪರಮೇಶ್ವರ್ ಅವರಿಗೆ ಸಿಎಂ ಆಗುವ ಅರ್ಹತೆ ಇದೆ. ಅವರು 2013ರಲ್ಲಿ ರಾಜ್ಯದಲ್ಲಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ. ಪರಮೇಶ್ವರ್ ಹೇಳಿಕೆಯಲ್ಲಿ ತಪ್ಪೇನಿದೆ? ಕಾಂಗ್ರೆಸ್ ಪಕ್ಷವನ್ನು ಹೆಚ್ಚು ಬೆಂಬಲಿಸುವವರೇ ಎಸ್ಸಿ, ಎಸ್ಟಿ, ಓಬಿಸಿ ಸಮುದಾಯದವರು ಎಂದು ತಿಳಿಸಿದರು.
ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟ ವಿಚಾರ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದರು.
