ಬೆಂಗಳೂರು: ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು. ಪಕ್ಷಕ್ಕೆ ಮುಜುಗರ ತರಲು, ಪಕ್ಷವನ್ನು ದುರ್ಬಲಗೊಳಿಸಲು ನನಗೆ ಇಷ್ಟವಿಲ್ಲ. ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಅಧಿಕಾರ ಹಸ್ತಾಂತರದ ವಿಚಾರ ನನಗೆ ಗೊತ್ತಿಲ್ಲ. ಇದು ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ. ಸಿಎಂ ಹಿರಿಯ ನಾಯಕರು, ನಮ್ಮ ಪಕ್ಷದ ಆಸ್ತಿ. ಅವರು ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಮುಂದಿನ ಬಜೆಟ್ ಅನ್ನು ಅವರೇ ಮಂಡಿಸುವುದಾಗಿ ಹೇಳಿದ್ದಾರೆ. ಬಹಳ ಸಂತೋಷ. ಅವರು ವಿರೋಧ ಪಕ್ಷದ ನಾಯಕರಾಗಿ ಶ್ರಮಿಸಿದ್ದಾರೆ. ಪಕ್ಷ ಕಟ್ಟಿದ್ದಾರೆ. ನಾವೆಲ್ಲರೂ ಸೇರಿ 2028 ಹಾಗೂ 2029ರ ಚುನಾವಣೆ ಗುರಿಯತ್ತ ಗಮನ ಹರಿಸಬೇಕು ಎಂದು ತಿಳಿಸಿದರು.
ನನಗೆ ಅಧಿಕಾರ ಸಿಗಲಿ ಎಂದು ಈಗ ಪೂಜೆ ಮಾಡುತ್ತಿರುವುದಕ್ಕಿಂತ, ನಾನು ಜೈಲಿಗೆ ಹೋದಾಗ ನನ್ನ ತಾಯಂದಿರು, ಯುವಕರು, ಹಿರಿಯರು ದೇವಾಲಯದ ಅರ್ಚಕರು ಮಾಡಿದ ಪ್ರಾರ್ಥನೆಯನ್ನು ಮರೆಯಲು ಸಾಧ್ಯವಿಲ್ಲ. ಬಿಜೆಪಿ ಅವಧಿಯಲ್ಲಿ ನಾನು ಜೈಲಿಂದ ಬಿಡುಗಡೆ ಆದಾಗ ಪೊಲೀಸರ ಬೆದರಿಕೆಗೂ ಹಿಂಜರಿಯದೇ ನನ್ನನ್ನು ಜನ ಸ್ವಾಗತಿಸಿದರು. ನಾನು ಜೈಲಲ್ಲಿ ಇದ್ದಾಗ ಕರವೇ ನಾರಾಯಣ ಗೌಡರಿಗೆ ಪ್ರತಿಭಟನೆ ನಡೆಸದಂತೆ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಬೆದರಿಕೆ ಹಾಕಿದ್ದರು. ಕೆಲವು ಸ್ವಾಮೀಜಿಗಳು ಬಂದರು, ಕೆಲವರು ಬರಲಿಲ್ಲ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಬೇರೆ ಹೇಳಿಕೆ ಕೊಟ್ಟರು. ಅನೇಕರು ನಮ್ಮ ಮನೆಗೆ ಬಂದು ನನ್ನ ಪತ್ನಿ ಹಾಗೂ ಮಕ್ಕಳ ಜೊತೆ ಮಾತನಾಡಿ ಧೈರ್ಯ ತುಂಬಿದ್ದರು. ಅಂದು ಜನ ಹರಕೆ ಹೊತ್ತು ಪ್ರಾರ್ಥಿಸಿದ್ದರು. ಆಗ ಕಟ್ಟಿಕೊಂಡ ಹರಕೆ ಮುಗಿಸಲು ಇನ್ನೂ ನನಗೆ ಆಗುತ್ತಿಲ್ಲ. ಅನೇಕರು ನಾನು ಬಿಡುಗಡೆಯಾಗುವವರೆಗೂ ಕಾಲಿಗೆ ಚಪ್ಪಲಿ ಹಾಕಿರಲಿಲ್ಲ. ನಾನು ಇಂದು ಡಿಸಿಎಂ ಆಗಿದ್ದು, ಪಕ್ಷದ ಅಧ್ಯಕ್ಷನಾಗಿದ್ದೇನೆ. ಕಷ್ಟಕಾಲದಲ್ಲಿದ್ದಾಗ ಮಾಡಿದ ಪ್ರಾರ್ಥನೆ, ಆಗ ಅವರು ನನಗೆ ಆತ್ಮಸ್ಥೈರ್ಯ ತುಂಬಿದ್ದು ನನಗೆ ಬಹಳ ವಿಶೇಷ ಎಂದು ತಿಳಿಸಿದರು.
ನಾನು ಚುನಾವಣೆ ಸಂದರ್ಭದಲ್ಲಿ ಮಹದೇವಪ್ಪ ಅವರ ಕ್ಷೇತ್ರ, ಮಂಡ್ಯ ಸೇರಿದಂತೆ ಎಲ್ಲಾ ಕಡೆಗಳಲ್ಲಿ ನನ್ನ ಮುಖ ನೋಡಿ ಮತ ಹಾಕಿ ಎಂದೂ ಕೇಳಿದ್ದೇನೆ. ಜನ ನಮ್ಮ ಸಾಮೂಹಿಕ ನಾಯಕತ್ವಕ್ಕೆ ಮತ ಹಾಕಿದ್ದಾರೆ. ನನ್ನೊಬ್ಬನಿಗಾಗಿ ಮತ ಹಾಕಿದ್ದಾರೆ ಎಂದು ನಾನು ಹೇಳುವುದಿಲ್ಲ. 224 ಕ್ಷೇತ್ರಗಳಲ್ಲಿ ನಮಗಿಂತ ನಮ್ಮ ಕಾರ್ಯಕರ್ತರು ಹೆಚ್ಚು ಶ್ರಮ ಹಾಕಿದ್ದಾರೆ. ಕಾರ್ಯಕರ್ತರು ಎಂದರೆ ನಾವು. ರಾಮಕೃಷ್ಣ ಹೆಗಡೆ ಅವರು ಸಿಎಂ ಆಗಿದ್ದಾಗ ಇದೇ ಚುನಾವಣೆಗೆ ನಾನು ಹಾಗೂ ಶ್ರೀಕಂಠಯ್ಯ ಅವರು ಚುನಾವಣೆಗೆ ಸ್ಪರ್ಧಿಸಿದ್ದೆವು. ಉಳಿದಂತೆ ಜನತಾದಳದಿಂದ ಸ್ಪರ್ಧಿಸಿದ್ದರು. ನನ್ನ ರಾಜಕೀಯ ಬದುಕಿನ ಮೊದಲ ಚುನಾವಣೆ ಅದಾಗಿತ್ತು. ಕನಕಪುರದಲ್ಲಿ ಈ ಚುನಾವಣೆ ಗೆದ್ದು ನಿರ್ದೇಶಕನಾಗಿ ಆಯ್ಕೆಯಾಗಿದ್ದೆ. ಆಗ ಆಸ್ಕರ್ ಫರ್ನಾಂಡೀಸ್ ಅವರು ಇದೇ ಕಟ್ಟಡದ ಕೋಣೆಯಲ್ಲಿ ಒಂದು ತಿಂಗಳು ಇದ್ದು, ಚುನಾವಣೆ ಮಾಡಿದ್ದರು. ಇದು ಕಾರ್ಯಕರ್ತರ ಚುನಾವಣೆ. ಕಾರ್ಯಕರ್ತರು ನನ್ನ ಚುನಾವಣೆ ಮಾಡುವಾಗ, ನಾನು ಅವರ ಚುನಾವಣೆಗೆ ಬಂದು ಮತ ಹಾಕದಿದ್ದರೆ ನನ್ನಿಂದ ಕರ್ತವ್ಯ ಲೋಪವಾಗುತ್ತದೆ. ಕಾರ್ಯಕರ್ತರು ಬಲಿಷ್ಠವಾಗಿದ್ದರೆ ಮಾತ್ರ ನಾವು ಬಲಿಷ್ಠವಾಗುತ್ತೇವೆ. ಚುನಾವಣೆಯಲ್ಲಿ ರಾಜಿ ಮಾಡಿಕೊಳ್ಳಿ ಎಂದು ಕೇಳಿದರು. ನಾವೇ ಚುನಾವಣೆ ಆಗಲಿ, ಕಾರ್ಯಕರ್ತರಿಗೆ ಚುನಾವಣೆ ಅನುಭವವಾಗಲಿ ಎಂದು ಹೇಳಿದ್ದೇವೆ. ನಾವು ಸಂಸತ್ ಚುನಾವಣೆ ವೇಳೆ ಯಾಮಾರಿದೆವು, ಎಷ್ಟೋ ಬೂತ್ ಗಳಿಗೆ ಏಜೆಂಟ್ ಗಳು ಇರಲಿಲ್ಲ. ಒಳೇಟು ಯಾವ ರೀತಿ ಬಿತ್ತು ಎಂದು ತಿಳಿಯಲಿಲ್ಲ. ನಾವು ನಮ್ಮ ತಪ್ಪನ್ನು ತಿದ್ದುಕೊಳ್ಳುತ್ತೇವೆ. ರಾಜಕಾರಣದಲ್ಲಿ ನಮ್ಮ ವೈರಿ ಯಾರು ಎಂದು ತಿಳಿಯಬೇಕು. ಈ ಚುನಾವಣೆಯಲ್ಲಿ ನಮ್ಮ ಪರ ಯಾರು ನಿಂತಿದ್ದಾರೆ, ವಿರುದ್ಧ ಯಾರು ನಿಂತಿದ್ದಾರೆ ಎಂದು ತಿಳಿಯುತ್ತದೆ. ಹೀಗಾಗಿ ಚುನಾವಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
