ವಿಜಯಪುರ: 600 ಪಿಎಸ್ಐ ಮತ್ತು 4,500 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಶೀಘ್ರವೇ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 4500 ಕಾನ್ಸ್ಟೇಬಲ್ ಮತ್ತು 600 ಪಿಎಸ್ಐ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದ್ದಾರೆ.
ಐದು ವರ್ಷದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ತುಂಬುವ ಪ್ರಯತ್ನ ನಡೆಯುತ್ತಿದೆ. ಒಳ ಮೀಸಲಾತಿ ವಿಚಾರದಲ್ಲಿ ಸ್ವಲ್ಪ ವಿಳಂಬವಾಗಿದ್ದು, ಇದನ್ನು ಬಗೆಹರಿಸಿದ್ದು, ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಿವೆ. ಸುಮಾರು 15 ಸಾವಿರ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಆರ್ಥಿಕ ಇಲಾಖೆಯಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಒಪ್ಪಿಗೆ ಸಿಕ್ಕಿದ್ದು, ಚಳಿಗಾಲದ ಅಧಿವೇಶನದ ಬಳಿಕ 4500 ಕಾನ್ಸ್ಟೇಬಲ್ ಗಳ ಹುದ್ದೆ ಭರ್ತಿ ಮಾಡಲಾಗುವುದು ಎಂದರು.
ಉದ್ಯೋಗ ಆಕಾಂಕ್ಷಿಗಳ ಅನುಕೂಲಕ್ಕಾಗಿ ಎರಡು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಹೊಸದಾಗಿ 600 ಪಿಎಸ್ಐಗಳ ನೇಮಕಾತಿಗೆ ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
