ಬೆಂಗಳೂರು: ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.
7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಮತ್ತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ತನಿಖೆ, ಮಹಜರು, ವಿಚಾರಣೆ ಹಿನ್ನೆಲೆಯಲ್ಲಿ ಮತ್ತಷ್ಟು ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಟಿಎಂಗೆ ಹಣ ಸಾಗಿಸುತ್ತಿದ್ದ ಸಿಎಂಎಸ್ ವಾಹನವನ್ನು ತಡೆದು, ಆರ್ ಬಿಐ ಅಧಿಕಾರಿಗಳ ಹೆಸರಲ್ಲಿ ಹಾಡಹಗಲೇ 7.11 ಕೋಟಿ ರೂ. ದರೋಡೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಈ ಪ್ರಕರಣ ಸಂಬಂಧ 9 ಆರೋಪಿಗಳನ್ನು ಬಂಧಿಸಿ ಹಣವನ್ನು ಜಪ್ತಿ ಮಾಡಲಾಗಿತ್ತು. ಇಂದು ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾಗಿದ್ದರಿಂದ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಆರೋಪಿಗಳನ್ನು ಇನ್ನಷ್ಟು ವಿಚಾರಣೆ ನಡೆಸುವ ಅಗತ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಪೊಲೀಸರು ಮತ್ತೆ ಕಸ್ಟಡಿಗೆ ಪಡೆದಿದ್ದಾರೆ.
