ನವದೆಹಲಿ: ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಬಿಜೆಪಿ ರೆಬಲ್ ನಾಯಕರು ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ದೆಹಲಿಗೆ ತೆರಳಿರುವ ಬಿಜೆಪಿ ರೆಬಲ್ ನಾಯಕರು, ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ್, ಎನ್. ಆರ್.ಸಂತೋಷ್ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿದ್ದು, ನಿನ್ನೆ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅವರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯ, ಅಹವಾಲುಗಳನ್ನು ಸಲ್ಲಿಸಿದ್ದಾರೆ.
ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದರೂ ವಿಪಕ್ಷವಾಗಿ ಬಿಜೆಪಿ ಸರಿಯಾಗಿ ಹೋರಾಟ ಮಾಡುತ್ತಿಲ್ಲ. ಸಮರ್ಪಕವಾಗಿ ಧ್ವನಿ ಎತ್ತುತ್ತಿಲ್ಲ. ರಾಜ್ಯಾಧ್ಯಕ್ಷರನ್ನು ಬದಲಾಯಿಸುವಂತೆ ದೂರು ನೀಡಿದ್ದಾರೆ. ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಸಂಘಟನೆ ಸೇರಿದಂತೆ ಸಮರ್ಪಕ ವಿಪಕ್ಷವಾಗಿ ಹೋರಾಟ ಮಾಡಬಹುದು ಎಂದು ರೆಬಲ್ ನಾಯಕರು ದೂರು ನೀಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ, ವರಿಷ್ಠರ ಭೇಟಿಗೆ ದೆಹಲಿಗೆ ಆಗಮಿಸಿದ್ದು, ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅವರನ್ನು ಭೇಟಿಯಾಗಿ ನಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದೇವೆ. ಹಲವು ವಿಚಾರಗಳನ್ನು ಮಾತನಾಡಿದ್ದೇವೆ. ರಾಅಜ್ಯದಲ್ಲಿ ರೈತರ ಸಮಸ್ಯೆ, ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಚರ್ಚಿಸಿದೇವೆ. ಅವಕಾಶವಿರುವಾಗ ಕೈಕಟ್ಟಿ ಕುಳಿತುಕೊಳ್ಳುವುದು ಸರ್ಯಲ್ಲ ಎಂಬುದನ್ನೂ ತಿಳಿಸಿದ್ದೇವೆ ಎಂದರು. ಇಂದು ಸಂಜೆ ದೆಹಲಿಯಿಂದ ಬೆಂಗಳೂರಿಗೆ ವಾಪಾಸ್ ಆಗುತ್ತಿರುವುದಾಗಿಯೂ ತಿಳಿಸಿದರು.
