ಬೆಳಗಾವಿ: ಪಿಹೆಚ್ ಡಿ ಪದವಿ ನೀಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಎರಡು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಈ ಬಗ್ಗೆ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿ ತ್ಯಾಗರಾಜ್ ಮಾಹಿತಿ ನೀಡಿದ್ದಾರೆ. ಪಿಹೆಚ್ ಡಿ ಪದವಿ ನೀಡಿಲ್ಲ ಎಂಬ ಕಾರಣಕ್ಕೆ ಕಳೆದ ವಾರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಘಟನೆ ಬಳಿಕ ಸಿಂಡಿಕೇಟ್ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಎರಡು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ, ಪಿಹೆಚ್ ಡಿ ಪದವಿಗೆ ಅರ್ಹರಾಗಿದ್ದಾರೆ. ಹೀಗಾಗಿ ನಿಯಮಾನುಸಾರ ಅರ್ಜಿ ಸಲ್ಲಿಸಿದರೆ ಅವರಿಗೆ ಪಿಹೆಚ್ ಡಿ ಪದವಿ ನೀಡಲು ತೀರ್ಮಾನಿಸಲಾಗಿದೆ. ಇನ್ನು ಕುರುಕುಳ ಆರೋಪ ಹಿನ್ನೆಲೆಯಲ್ಲಿ ಪ್ರಾಧ್ಯಾಪಕ ಕೆ.ಎಲ್.ಎಸ್.ಮೂರ್ತಿ ಅವರಿಗೆ ಕಡ್ದಾಯ ನಿವೃತ್ತಿಗೆ ಆದೇಶ ನೀಡಲಾಗಿದೆ. ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜೊತೆ ಯಾವ ರೀತಿ ನಡೆದುಕೊಳ್ಳಬೇಕು ಎಂಬ ಬಗ್ಗೆ ನಿಯಮವಿದೆ. ಈ ನಿಯಮವನ್ನು ಪ್ರಾಧ್ಯಾಪಕ ಮೂರ್ತಿ ಪಾಲಿಸಿಲ್ಲ. ಹಾಗಾಗಿ ಅವರಿಗೆ ಕಡ್ಡಾಯ ನಿವೃತ್ತಿ ನೀಡಲಾಗುವುದು ಎಂದರು.
