ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಫಾರಂ-ಎಫ್ ಸೇರಿದಂತೆ ಅಗತ್ಯ ದಾಖಲಾತಿಗಳ ನಿರ್ವಹಣೆ ಕಡ್ಡಾಯ ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಟಿ.ಲಿಂಗರಾಜು ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಆಯೋಜಿಸಿದ್ದ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಮತ್ತು ಎಂ.ಟಿ.ಪಿ ಕಾಯ್ದೆಯ ಅಡಿ ಬರುವ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳು ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆಯಡಿ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಬೇಕು ಹಾಗೂ ನೋಂದಣಿ ಅವಧಿ ಪೂರ್ಣಗೊಳ್ಳುವುದಕ್ಕಿಂತ ಮೂರು ತಿಂಗಳ ಮುಂಚೆ ಅರ್ಜಿ ಸಲ್ಲಿಸಿ ನವೀಕರಣ ಮಾಡಿಕೊಳ್ಳಬೇಕು. ಸ್ಕ್ಯಾನಿಂಗ್ ಕುರಿತಾದ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ನಿಗದಿತ ನಮೂನೆಗಳನ್ನು ನಿರ್ವಹಿಸಬೇಕು. ನೋಂದಣಿ, ಪರವಾನಗಿ ನವೀಕರಣವಿಲ್ಲದ ಆರೋಗ್ಯ ಸಂಸ್ಥೆಗಳ ಮೇಲೆ ಹಾಗೂ ನಿಗದಿತ ನಿಯಮ ಪಾಲನೆ ಮತ್ತು ದಾಖಲಾತಿಗಳನ್ನು ನಿರ್ವಹಿಸದ ಆರೋಗ್ಯ ಸಂಸ್ಥೆಗಳನ್ನು ಮುಚ್ಚಿಸಲು ಅಥವಾ ಸ್ಥಗಿತಗೊಳಿಸಲು ಕಾಯ್ದೆಯಡಿ ಅವಕಾಶವಿರುತ್ತದೆ. ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆಯನ್ನು ಜಿಲ್ಲೆಯಲ್ಲಿ ಸಮಪರ್ಕವಾಗಿ ಅನುಷ್ಠಾನ ಮಾಡಲಾಗುತ್ತಿದ್ದು, ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳು ಕಾಯ್ದೆ ಪಾಲನೆ ಜೊತೆಗೆ ನಿಯಮಾನುಸಾರ ನೋಂದಣಿ, ನವೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.
ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆ-1994 ರಡಿಯಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣಲಿಂಗ ಆಯ್ಕೆಗೆ ಯಾವುದೇ ರೀತಿಯ ಅವಕಾಶವಿಲ್ಲ. ಆದಾಗ್ಯೂ ಇಂತಹ ಕಾನೂನು ಬಾಹಿರ ಕ್ರಮಗಳಲ್ಲಿ ಭಾಗಿಯಾದಲ್ಲಿ ಅಂತವರ ವಿರುದ್ಧ ಕಠಿಣವಾದ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕಾಯ್ದೆಯಡಿ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸಬೇಕು. ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕುರಿತಂತೆ ಯಾವುದೇ ರೀತಿಯ ಜಾಹೀರಾತು ನೀಡುವಂತಿಲ್ಲ. ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್‌ಗಳ ತಪಾಸಣಾ ಮತ್ತು ಮೇಲ್ವಿಚಾರಣೆಗಾಗಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ತಪಾಸಣಾ ಸಮಿತಿಯನ್ನು ಈ ಕಾಯ್ದೆಯಡಿ ರಚಿಸಲಾಗಿದೆ. ತಪಾಸಣಾ ಸಮಿತಿಯು ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಸಲಹಾ ಸಮಿತಿ ಸಭೆಯಲ್ಲಿ ವರದಿ ನೀಡುತ್ತದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಅನುಷ್ಠಾನಾಧಿಕಾರಿ ಡಾ.ರವೀಂದ್ರನಾಥ್ ಎಂ.ಎಚ್ ಅವರು ಮಾತನಾಡಿ, ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆ ಅನುಸಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧಿಸಲಾಗಿದ್ದು, ಸರ್ಕಾರಿ ಅಥವಾ ಖಾಸಗಿ ಯಾವುದೇ ವೈದ್ಯರು ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆಯಂತಹ ಕೃತ್ಯಗಳಲ್ಲಿ ಭಾಗಿಯಾದಲ್ಲಿ ಅವರಿಗೆ ಕಾರಾಗೃಹ ಶಿಕ್ಷೆ ಸಹಿತ ದಂಡವನ್ನು ವಿಧಿಸಲಾಗುವುದು. ಮೊದಲ ಅಪರಾಧಕ್ಕೆ 5 ವರ್ಷ ವೈದ್ಯಕೀಯ ಪರವಾನಿಗೆಯನ್ನು ರದ್ದುಪಡಿಸುವುದು. ನಂತರದ ಅಪರಾದಕ್ಕೆ ಸಂಬಂಧಿಸಿದ ವೈದ್ಯರ ವೈದ್ಯಕೀಯ ಪರವಾನಿಗೆಯನ್ನು ರಾಜ್ಯ ವೈದ್ಯಕೀಯ ಮಂಡಳಿಯಿಂದ ಶಾಶ್ವತವಾಗಿ ತೆಗೆದು ಹಾಕಿ, ವೈದ್ಯಕೀಯ ವೃತ್ತಿ ನಡೆಸಲು ಅಜೀವ ನಿಷೇಧ ಹೇರಲಾಗುವುದು. ಒಂದು ವೇಳೆ ಸ್ವತಃ ಮಹಿಳೆ, ಆಕೆಯ ಪತಿ ಅಥವಾ ಸಂಬಂಧಿಕರು ಭ್ರೂಣ ಲಿಂಗ ಪತ್ತೆಗೆ ಯತ್ನಿಸಿ, ವೈದ್ಯರಿಗೆ ಒತ್ತಡ ಹೇರಿದಲ್ಲಿ ಅವರಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ರೂ.50 ಸಾವಿರದಿಂದ 1 ಲಕ್ಷದವರೆಗೆ ದಂಡವನ್ನು ವಿಧಿಸಲು ಅವಕಾಶವಿದೆ ಎಂದು ಸಭೆಗೆ ತಿಳಿಸಿದರು.
ಜಿಲ್ಲೆಯ ವಿವಿಧ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳ ನೋಂದಣಿ, ನವೀಕರಣ ಹಾಗೂ ಹೊಸ ಅರ್ಜಿಗಳಿಗೆ ಅನುಮತಿ ಕುರಿತಂತೆ ಚರ್ಚಿಸಲಾಯಿತು. ಸಭೆಯಲ್ಲಿ ಸಿಎಸಿ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಪ್ರಕಾಶ ಮುನಿರಾಬಾದ್ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞರು ಹಾಗೂ ಪಿ.ಸಿ & ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರಾದ ಡಾ ಕೆ.ಹೆಚ್.ತೊಗರಿ, ಸಮಿತಿ ಸದಸ್ಯರುಗಳಾದ ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥರು ಹಾಗೂ ಮಕ್ಕಳ ತಜ್ಞರಾದ ಡಾ.ಗಿರೀಶ, ಗಂಗಾವತಿ ಉಪವಿಭಾಗ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದ ಡಾ. ಸ್ಮಿತಾ ಜಿ. ಐಲಿ, ಎನ್.ಜಿ.ಓ.ಗಳ ಪ್ರತಿನಿಧಿಗಳಾದ ಡಾ ವಿಶ್ವನಾಥ ಬಸವರಾಜ ನಲ್ವಾಡ, ರೇಷ್ಮಾ ಸೇರಿದಂತೆ ಇತರ ಸದಸ್ಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು
