ಚಿಕ್ಕಮಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 11 ತಿಂಗಳಲ್ಲಿ 13,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದೆ. ಇನ್ನೊಂದು ವಾರದಲ್ಲಿ ಟಿಇಟಿ ಮೂಲಕ 12,000 ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಮೇಲ್ಪಾಲ್ ನಲ್ಲಿ ನೂತನವಾಗಿ ನಿರ್ಮಿಸಿದ ಕರ್ಕೇಶ್ವರ ಗ್ರಾಮ ಪಂಚಾಯಿತಿಯ ಭಾರತ ನಿರ್ಮಾಣ ರಾಜೀವ್ ಗಾಂಧಿ ಸೇವಾ ಕೇಂದ್ರ ಮತ್ತು ನೂತನ ಪ್ರೌಢಶಾಲಾ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ಎರಡೂವರೆ ವರ್ಷದಲ್ಲಿ ನಮ್ಮ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡಿ ಬಜೆಟ್ ನ ಶೇಕಡ 12ರಷ್ಟು 50,000 ಕೋಟಿ ರೂ. ನೀಡಲಾಗುತ್ತಿದೆ. ಭಾರತದಲ್ಲಿ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ ರಾಜ್ಯ ನಮ್ಮದಾಗಿದೆ ಎಂದು ಹೇಳಿದ್ದಾರೆ.
ಶಿಕ್ಷಣದಲ್ಲಿ ಸುಧಾರಣೆ ತರುವ ಉದ್ದೇಶದಿಂದ ಎಸ್ಎಸ್ಎಲ್ಸಿ ಪರೀಕ್ಷೆ ವಿಧಾನ ಬದಲಾಯಿಸಿ ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ಈ ಹಿಂದೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಇಬ್ಬರು ವಿದ್ಯಾರ್ಥಿಗಳು ಟಾಪರ್ ಆಗಿರುತ್ತಿದ್ದರು. ಕಳೆದ ಬಾರಿ 51 ವಿದ್ಯಾರ್ಥಿಗಳು 625 ಅಂಕ ಪಡೆದು ಟಾಪರ್ ಆಗಿದ್ದಾರೆ ಎಂದರು.
ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲೇ ರಾಜ್ಯದಲ್ಲಿ 51,000 ಅತಿಥಿ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡಲಾಗಿತ್ತು. ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಕೆಪಿಎಸ್ ಶಾಲೆ ಆರಂಭಿಸುವ ಉದ್ದೇಶವಿದೆ. ಎಲ್ಕೆಜಿಯಿಂದ 12ನೇ ತರಗತಿಯ ವರೆಗೆ ಒಂದೇ ಸೂರಿ ನಡೆ ಶಿಕ್ಷಣ ಸಿಗಲಿದೆ. ಶಾಲೆಗೆ ಬರಲು ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಆಶಯವಾಗಿದೆ. ಮುಂದಿನ ವರ್ಷ ರಾಜ್ಯದಲ್ಲಿ 3000 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಗುರಿ ಇದೆ ಎಂದು ಹೇಳಿದ್ದಾರೆ.
