ಬೆಳಗಾವಿ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ನಗರಸಭೆ, ಪುರಸಭೆ ಒಳಗೊಂಡು 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಏಪ್ರಿಲ್ ನಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆದಿಲ್ಲ. ನಗರ ಸ್ಥಳೀಯ ಸಂಸ್ಥೆಗಳ ಅವಧಿ ಕೂಡ ಮುಕ್ತಾಯವಾಗಿದೆ. ಗ್ರಾಮ ಪಂಚಾಯಿತಿಗಳ ಅವಧಿಯು ಮುಕ್ತಾಯವಾಗುತ್ತಿದೆ. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ವಿಳಂಬದ ಕೇಸ್ ನ್ಯಾಯಾಲಯದಲ್ಲಿದ್ದು, ತ್ವರಿತ ಗತಿಯಲ್ಲಿ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರ್ಟ್ ಕೂಡ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 30 ತಿಂಗಳ ಅವಧಿಯಲ್ಲಿ ಇದುವರೆಗೂ ಒಂದು ಸ್ಥಳೀಯ ಸಂಸ್ಥೆ ಚುನಾವಣೆ ಕೂಡ ನಡೆದಿಲ್ಲ. ಅನಗತ್ಯ ವಿಳಂಬ ಮಾಡದೆ ಸ್ಥಳೀಯ ಸಂಸ್ಥೆಗಳಿಗೆ ವ್ಯಾಪ್ತಿ ಪುನರ್ ವಿಂಗಡಣೆ ಮಾಡಿಕೊಂಡು ಅಂತಿಮ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು. ನಂತರ ಚುನಾವಣೆ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳಬೇಕು ಎನ್ನುವುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
6500ಕ್ಕೂ ಅಧಿಕ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಚುನಾವಣೆಗಾಗಿ ಕಾಯುತ್ತಿವೆ. ಈ ಪೈಕಿ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಾಗಿದ್ದು, ರಾಜ್ಯ ಚುನಾವಣಾ ಆಯೋಗ, ವಿರೋಧ ಪಕ್ಷಗಳು ಕೂಡ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿವೆ.
195 ನಗರ ಸಂಸ್ಥೆ, 5952 ಗ್ರಾಮ ಪಂಚಾಯಿತಿ ಅವಧಿ ಕೂಡ ಮುಗಿಯಲಿದ್ದು, ಇದರೊಂದಿಗೆ 31 ಜಿಲ್ಲಾ ಪಂಚಾಯಿತಿ, 239 ತಾಲೂಕು ಪಂಚಾಯಿತಿ, ಜಿಬಿಎ ಅಡಿಯಲ್ಲಿ 5 ಹೊಸ ಪಾಲಿಕೆಗಳ ಚುನಾವಣೆ ನಡೆಯುವುದು ಬಾಕಿ ಇದೆ.
